ಇದೇ 28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸುಮಾರು 50,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಅವರ ಭವಿಷ್ಯ ಈ ಪರೀಕ್ಷೆಯಲ್ಲಿ ಇರುತ್ತದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ನಿಯೋಜಿತ ಅಧಿಕಾರಿಗಳು ಕಟ್ಟೆಚ್ಚರವಹಿಸುವಂತೆ ಅವರು ಸೂಚಿಸಿದರು.
ಪ್ರಶ್ನೆಪತ್ರಿಕೆ ಸಂಗ್ರಹ ಹಾಗೂ ವಿತರಣೆ ಜವಾಬ್ದಾರಿಗೆ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದ್ದು, ಅಪರ ಜಿಲ್ಲಾಧಿಕಾರಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಖಜಾನಾಧಿಕಾರಿಗಳು ಸಮಿತಿಯ ಸದಸ್ಯರಾಗಿರುತ್ತಾರೆ. ಪ್ರಶ್ನೆ ಪತ್ರಿಕೆ ಖಜಾನೆಯಲ್ಲಿ ಸೂಕ್ತ ಬಂದೋಬಸ್ತ್ ನಲ್ಲಿ ಇರಿಸಲಾಗಿರುತ್ತದೆ. ಇದಕ್ಕೆ ಸಂಬಂಧಿಸಿದಂತೆ ಸಿ.ಸಿ.ಟಿವಿ ಹಾಗೂ ನಿರಂತರ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲದೆ ಯುಪಿಎಸ್ ಸೌಲಭ್ಯವನ್ನೂ ಖಜಾನೆ ಹೊಂದಿರಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ತ್ರಿಸದಸ್ಯ ಸಮಿತಿ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಅವರು ಸೂಚಿಸಿದರು.
ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕೊಂಡೊಯ್ಯಲು ನಿಗದಿಪಡಿಸಲಾದ ವಾಹನಗಳಿಗೆ ಜಿಪಿಎಸ್ ಅಳವಡಿಸಬೇಕು. ನಿಗದಿತ ಮಾರ್ಗದಲ್ಲಿ ವಾಹನಗಳು ನಿಗದಿತ ಸಮಯಕ್ಕೆ ಸರಿಯಾಗಿ ಪ್ರಶ್ನೆಪತ್ರಿಕೆಯನ್ನು ಕೊಂಡೊಯ್ಯಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು ಎಂದರು.
ಮುಕ್ತ ಹಾಗೂ ನಿರ್ಭೀತ ಪರೀಕ್ಷೆ ವಾತಾವರಣಕ್ಕಾಗಿ ಪರೀಕ್ಷಾ ಕೇಂದ್ರಗಳು ಸಜ್ಜುಗೊಳ್ಳಬೇಕು ಎಂದ ಅವರು, ಇದೇ 23ರೊಳಗೆ ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಲಭ್ಯ ಒದಗಿಸಿರುವ ಬಗ್ಗೆ ವರದಿ ಸಲ್ಲಿಸಿ ತಮ್ಮಿಂದ ಸಹಿ ಪಡೆಯಬೇಕು ಎಂದು ತಿಳಿಸಿದರು.
ಪರೀಕ್ಷಾ ಕೊಠಡಿಗಳಲ್ಲಿ ವೆಬ್‌ಕಾಸ್ಟಿಂಗ್ ಇರುವುದರಿಂದ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಾರ್ ರೂಮ್ ಕಚೇರಿಗೆ ವ್ಯವಸ್ಥೆ ಮಾಡಬೇಕು ಎಂದ ಅವರು ಪರೀಕ್ಷೆಗೆ ಸಂಬಂಧಿಸಿದಂತೆ ಒಂದು ಲೋಪವೂ ಇಲ್ಲದಂತೆ ನಿಯೋಜಿತ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಅವರು ಸೂಚಿಸಿದರು.
ವಿದ್ಯಾರ್ಥಿಗಳ ಸುಗಮ ಪ್ರಯಾಣಕ್ಕಾಗಿ ಜಿಲ್ಲೆಯಾದ್ಯಂತ ಎಲ್ಲಾ ಮಾರ್ಗಗಳಲ್ಲಿ ಬಸ್ಸುಗಳು ಸರಿಯಾದ ಸಮಯಕ್ಕೆ ಸಂಚರಿಸಬೇಕು. ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂಬAಧಿಸಿದ ಘಟಕಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೇರಿದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆಯ ಉಭಯ ಜಿಲ್ಲೆಗಳ ಉಪನಿರ್ದೇಶಕರು, ಖಜಾನಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.





