ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯದಾದ್ಯಂತ 2002ರ ಮತದಾರರ ಪಟ್ಟಿಯೊಂದಿಗೆ ಹೊಸದಾಗಿ ಪರಿಷ್ಕೃತ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ಪ್ರಕ್ರಿಯೆ ದೇಶದ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕಿನ ರಕ್ಷಣೆಗೆ ಅತ್ಯಂತ ಮಹತ್ವದ್ದಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮಹಮ್ಮದ್ ಮೌಲಾ ತಿಳಿಸಿದ್ದಾರೆ.
2002ರ ಮತದಾರರ ಪಟ್ಟಿಯಲ್ಲಿ ಇರುವ ತಮ್ಮ ಹೆಸರು, ವಿಳಾಸ ಸೇರಿದಂತೆ ಎಲ್ಲಾ ವಿವರಗಳು ಪ್ರಸ್ತುತ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿದೆಯೇ ಎಂಬುದನ್ನು ಮತದಾರರು ಖಚಿತಪಡಿಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ತಮ್ಮ ತಮ್ಮ ವಾರ್ಡ್‌ಗಳ ಬಿ.ಎಲ್.ಒ (ಬೂತ್ ಮಟ್ಟದ ಅಧಿಕಾರಿ)ರನ್ನು ಸಂಪರ್ಕಿಸಿ ಮತದಾರರ ವಿವರಗಳನ್ನು ಮ್ಯಾಪ್ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಒಂದು ವೇಳೆ 2002ರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿದ್ದಲ್ಲಿ, ತಂದೆ–ತಾಯಂದಿರು ಅಥವಾ ಅಜ್ಜ–ಅಜ್ಜಿಯರ ವಿವರಗಳನ್ನು ಆಧಾರವಾಗಿ ಬಳಸಿಕೊಂಡು ಮ್ಯಾಪಿಂಗ್ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ. ವಿಶೇಷವಾಗಿ ವಾಸ್ತವ್ಯವನ್ನು ಸ್ಥಳಾಂತರ ಮಾಡಿಕೊಂಡಿರುವ ಮತದಾರರು ಹಾಗೂ ವಿವಾಹ ನಂತರ ಬೇರೆ ಪ್ರದೇಶಗಳಿಗೆ ತೆರಳಿರುವ ಮಹಿಳೆಯರು ಈ ಬಗ್ಗೆ ವಿಶೇಷ ಗಮನ ಹರಿಸಬೇಕಾಗಿದೆ. ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮತದಾನದ ಹಕ್ಕಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದ್ದಾರೆ.
ಈ ಕುರಿತು ಉಡುಪಿ ಜಿಲ್ಲಾಧಿಕಾರಿಗಳು ಈಗಾಗಲೇ ಅಧಿಕೃತ ಹೇಳಿಕೆ ನೀಡಿರುವುದರಿಂದ, ಮತದಾರರ ಪಟ್ಟಿಯ ಮ್ಯಾಪಿಂಗ್ ಪ್ರಕ್ರಿಯೆಗೆ ಎಲ್ಲರೂ ಸಹಕರಿಸಿ ತಮ್ಮ ಮತದಾನದ ಹಕ್ಕನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ. ಜೊತೆಗೆ ಮಸೀದಿ ಹಾಗೂ ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಜನರಿಗೆ ಈ ಕುರಿತು ಮಾಹಿತಿ ನೀಡುವ ಮೂಲಕ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಅವರು ಮಾಧ್ಯಮಗಳ ಮೂಲಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





