ಪ್ರವಾಸಿಗರನ್ನು ಸಮುದ್ರ ವಿಹಾರಕ್ಕೆ ಕರೆದೊಯ್ಯುತ್ತಿದ್ದ ದೋಣಿಯೊಂದು ಸಮುದ್ರದಲ್ಲಿ ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರವಾಗಿ ಅಸ್ವಸ್ಥಗೊಂಡು, ಇನ್ನೂ ಕೆಲವರು ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಕೋಡಿಬೆಂಗ್ರೆ ಬೀಚ್ ಸಮೀಪ ಸಂಭವಿಸಿದೆ.
ರೆಸಾರ್ಟ್‌ನಲ್ಲಿ ತಂಗಿದ್ದ ಸುಮಾರು 10 ಮಂದಿ ಪ್ರವಾಸಿಗರನ್ನು ವಿಹಾರಕ್ಕಾಗಿ ದೋಣಿಯಲ್ಲಿ ಸಮುದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಪ್ರವಾಸಿಗರಲ್ಲಿ ಯಾರೂ ಲೈಫ್ ಜಾಕೆಟ್ ಧರಿಸಿರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಸಮುದ್ರದ ಮಧ್ಯಭಾಗದಲ್ಲಿ ದೋಣಿ ಅಕಸ್ಮಿಕವಾಗಿ ಪಲ್ಟಿಯಾಗಿದ್ದು, ಇದರಿಂದ ದೋಣಿಯಲ್ಲಿದ್ದ ಎಲ್ಲ ಪ್ರವಾಸಿಗರು ನೀರಿಗೆ ಬಿದ್ದಿದ್ದಾರೆ. ತಕ್ಷಣ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ನಾಲ್ವರು ಪ್ರವಾಸಿಗರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿರುವುದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿ ಪಡೆದ ಮಲ್ಪೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ಘಟನೆಗೆ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.





