ಸನ್ಮಾನ್ಯ ಭಾರತದ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿರುವ ಸಂದರ್ಭದಲ್ಲಿ ನಿಯಮಾನುಸಾರ ಶಿಷ್ಟಾಚಾರವನ್ನು ಪಾಲಿಸಬೇಕಾಗಿರುವ ಹಿನ್ನೆಲೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತ 2023 ಸೆಕ್ಷನ್ 163 ರನ್ವಯ ಈ ಕೆಳಗಿನಂತೆ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿರುತ್ತಾರೆ.
ಉಡುಪಿ ನಗರ ವ್ಯಾಪ್ತಿಯೊಳಗಿನ ಎನ್.ಹೆಚ್-66 ಮತ್ತು ಸಂಪರ್ಕ ರಸ್ತೆಗಳ ಮೇಲೆ ನಡೆಯುತ್ತಿರುವ ಎಲ್ಲಾ ಭೂಮಿ ಅಗೆಯುವ, ಕೊರೆಯುವ, ತೋಡುವ ಹಾಗೂ ಗುಂಡಿ ತೋಡುವ ಕೆಲಸಗಳನ್ನು ತಕ್ಷಣವೇ ನಿಲ್ಲಿಸಬೇಕು. ಈ ನಿರ್ಬಂಧ ಆದೇಶವು ನ. 28 ರ ಸಂಜೆ 5 ರ ವರೆಗೆ ಜಾರಿಯಲ್ಲಿರುತ್ತದೆ. ತುರ್ತು ಪರಿಸ್ಥಿತಿಗಳಲ್ಲಿ ಕಾರ್ಯ ನಿರ್ವಹಿಸಬೇಕಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ.
ಈ ಆದೇಶವನ್ನು ಎನ್.ಹೆಚ್ ವಿಭಾಗೀಯ ಅಧಿಕಾರಿಗಳು, ಪಿ.ಡಬ್ಲೂ.ಡಿ, ಪಿ.ಆರ್.ಇ.ಡಿ, ನಗರಸಭೆ, ಬಿ.ಎಸ್.ಎನ್.ಎಲ್ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ನ.28ರಂದು ಉಡುಪಿ ನಗರಸಭೆ ವ್ಯಾಪ್ತಿ ಶಾಲೆಗೆ ರಜೆ
ನ.28ರ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಉಡುಪಿ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಒಂದು ದಿನದ ಮಟ್ಟಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.
ಪ್ರಧಾನ ಮಂತ್ರಿಗಳ ಉಡುಪಿ ಭೇಟಿ ಸಂದರ್ಭದಲ್ಲಿ ಶಾಲಾ ಮಕ್ಕಳ ಸಂಚಾರಕ್ಕೆ ತೊಡಕುಂಟಾಗುವ ಸಾಧ್ಯತೆಗಳಿರುವುದರಿಂದ ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಪ್ರಸ್ತುತ ನೀಡಿರುವ ರಜೆ ಅವಧಿಯನ್ನು ನಿರ್ವಹಿಸಬೇಕಾದ ಪಠ್ಯವನ್ನು ಇತರ ಸಾರ್ವತ್ರಿಕ ರಜಾದಿನಗಳಂದು ಸರಿದೂಗಿಸಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.





