ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬೈಂದೂರು ಮತ್ತು ಕುಂದಾಪುರ ತಾಲೂಕು ಸಮಿತಿಗಳು ಜಂಟಿಯಾಗಿ ಕುಂದಾಪುರ ಹಂಚು ಕಾರ್ಮಿಕರ ಭವನದಲ್ಲಿ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾ ಕಾರ್ಯದರ್ಶಿ ಶೀಲಾವತಿ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಹಕ್ಕುಗಳು, ಸಮಾನತೆ ಹಾಗೂ ಸಾಮಾಜಿಕ ಜಾಗೃತಿಯ ಅಗತ್ಯತೆ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಜಾಗೃತಿ ಕುರಿತು ವಿಶೇಷ ಉಪನ್ಯಾಸ ಹಾಗೂ ಮಹಿಳೆಯರಿಗಾಗಿ ಸ್ಪರ್ಧಾತ್ಮಕ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
ಕುಂದಾಪುರ ಆರೋಗ್ಯ ಇಲಾಖೆಯಿಂದ ಆಗಮಿಸಿದ ಸುಜನ್ಮಾಲ ಅವರು ಆಯುಷ್ಮಾನ್ ಆರೋಗ್ಯ ಯೋಜನೆಯಡಿ ರೋಗಿಗಳು ಪ್ರಥಮ ಹಂತದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹೇಗೆ ಚಿಕಿತ್ಸೆ ಪಡೆಯಬಹುದು ಎಂಬ ಕುರಿತು ಮಾಹಿತಿ ನೀಡಿದರು. ಜೊತೆಗೆ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳ ಲಕ್ಷಣಗಳು, ದೇಹದಲ್ಲಿ ಉಂಟಾಗುವ ಬದಲಾವಣೆಗಳನ್ನು ಹೇಗೆ ಗುರುತಿಸಬೇಕು ಎಂಬುದರ ಕುರಿತು ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಸರೋಜ, ಕುಂದಾಪುರ ತಾಲೂಕು ಅಧ್ಯಕ್ಷೆ ಬಲ್ಕಿಸ್, ಜಿಲ್ಲಾ ಕಾರ್ಯದರ್ಶಿ ಶೀಲಾವತಿ, ಜಿಲ್ಲಾ ಸಮಿತಿ ಸದಸ್ಯರಾದ ಸುಶೀಲ ಉಪ್ಪುಂದ, ಮಾಲತಿ ಗಂಗೊಳ್ಳಿ, ಗಿರಿಜಾ ಗುಜ್ಜಾಡಿ, ಗುಲಾಬಿ ಮೂವಾಡಿ ಸೇರಿದಂತೆ ಹಲವು ಸದಸ್ಯರು ಉಪಸ್ಥಿತರಿದ್ದರು.
ಸ್ಪರ್ಧಾತ್ಮಕ ಕ್ರೀಡಾಕೂಟದ ವಿಜೇತರಿಗೆ ಸುರೇಶ್ ಕಲ್ಲಾಗಾರ್, ಚಿಕ್ಕಣ್ಣ, ರವಿ ವಿ.ಎಂ., ಮಹಾಬಲ ವಡೇರ ಹೋಬಳಿ ಅವರು ಬಹುಮಾನ ವಿತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾಧ್ಯಕ್ಷೆ ಸರೋಜ ಅಧ್ಯಕ್ಷೀಯ ಭಾಷಣದಲ್ಲಿ ಮಹಿಳೆಯರ ಸಬಲೀಕರಣದ ಅಗತ್ಯತೆಯನ್ನು ಒತ್ತಿಹೇಳಿ, ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು.





