ಉಡುಪಿಯಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಪ್ರವಚನ ಕಾರ್ಯಕ್ರಮವನ್ನು ವಿರೋಧಿಸಿ ಹಿಂದುತ್ವವಾದಿ ಕೋಮು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪರಿಣಾಮ, ನಗರದಲ್ಲಿ ಉದ್ವಗ್ನ ಪರಿಸ್ಥಿತಿ ಉಂಟಾಗಿದ್ದು, 38 ಮಂದಿ ಹಿಂದುತ್ವವಾದಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ಮಾರ್ಚ್ 20 ರಿಂದ 22 ರವರೆಗೆ ಪ್ರತಿದಿನ ಸಂಜೆ 5.30ರಿಂದ ರಾತ್ರಿ 9.30 ರವರೆಗೆ ‘ಸಮಾಧಾನ ಮಹೋತ್ಸವ’ ಎಂಬ ಧಾರ್ಮಿಕ ಪ್ರವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಉಡುಪಿ ಜಿಲ್ಲಾ ಚರ್ಚ್‌ಗಳ ಒಕ್ಕೂಟದ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್ ಕೂಡ, ಕಾರ್ಯಕ್ರಮಕ್ಕೆ ಅನುಮತಿ ನೀಡಿದೆ.
ತಮಿಳುನಾಡಿನ ಪಾಸ್ಟರ್ ಮೋಹನ್ ಸಿ. ಲಾಜರಸ್ ಅವರು ಮಾರ್ಚ್ 22ರಂದು ಕಾರ್ಯಕ್ರಮದಲ್ಲಿ ವಿಶೇಷ ಭಾಷಣ ಮಾಡಲಿದ್ದಾರೆ. ಅವರ ಭಾಗವಹಿಸುವಿಕೆಯನ್ನು ಆಕ್ಷೇಪಿಸಿರುವ ಹಿಂದು ಜಾಗರಣ ವೇದಿಕೆ ಮತ್ತು ಇತರ ಹಿಂದುತ್ವವಾದಿ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ದಾಂಧಲೆ ನಡೆಸಿದ್ದಾರೆ.
ಒಟ್ಟು 38 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಲ್ಲ 38 ಮಂದಿ ವಿರುದ್ಧ ಬಿಎನ್‌ಎಸ್ ಸೆಕ್ಷನ್ 189(2) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 112 ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




