ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾರಿಗೆ ನಿಯಮಗಳನ್ನು ಗಾಳಿಗೆ ತೂರಿ ವೈಟ್‌ಬೋರ್ಡ್ ಅಥವಾ ಖಾಸಗಿ ವಾಹನಗಳನ್ನು ಬಾಡಿಗೆ ಉದ್ದೇಶಕ್ಕಾಗಿ ಬಳಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಆದೇಶಿಸಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ. ಟ್ಯಾಕ್ಸಿ ಚಾಲಕರು ಸಲ್ಲಿಸಿದ ದೂರಿನನ್ವಯ, ಅನೇಕ ಖಾಸಗಿ ವಾಹನಗಳು ಅನಧಿಕೃತವಾಗಿ ಪ್ರವಾಸಿಗರನ್ನು ಕರೆದೊಯ್ಯುತ್ತಿರುವುದು ಗಮನಕ್ಕೆ ಬಂದಿದೆ.
ಈ ಕುರಿತು ಫೋಟೋ ಸಹಿತ ಸಲ್ಲಿಕೆಯಾಗಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು, ಇಂತಹ ವಾಹನಗಳ ವಿರುದ್ಧ ತಕ್ಷಣವೇ ತನಿಖೆ ನಡೆಸಿ ದಂಡ ವಿಧಿಸುವಂತೆ ಸೂಚಿಸಿದರು.ಅಲ್ಲದೆ, ನಿಯಮ ಉಲ್ಲಂಘನೆ ಪುನರಾವರ್ತನೆಯಾದಲ್ಲಿ ಅಂತಹ ವಾಹನಗಳ ಲೈಸೆನ್ಸ್ ಅನ್ನು ಶಾಶ್ವತವಾಗಿ ರದ್ದುಗೊಳಿಸಲು ಸಾರಿಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಇದರಿಂದ ಇನ್ನು ಮುಂದೆ ಜಿಲ್ಲೆಯಲ್ಲಿ ವೈಟ್‌ಬೋರ್ಡ್ ವಾಹನಗಳಲ್ಲಿ ಬಾಡಿಗೆ ಓಡಿಸುವುದು ಶಿಕ್ಷಾರ್ಹ ಅಪರಾಧವಾಗಲಿದೆ. ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಅನಧಿಕೃತ ಟ್ಯಾಕ್ಸಿಗಳು, ಆಟೋಗಳು ಮತ್ತು ಬಾಡಿಗೆ ಬೈಕ್‌ಗಳ ವಿರುದ್ಧವೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.
ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ಸೂಚಕ: ಸಚಿವ ಮಂಕಾಳ ವೈದ್ಯ
ಆಟೋ ಮತ್ತು ಟ್ಯಾಕ್ಸಿ ನಿಲ್ದಾಣಗಳ ಸಮಸ್ಯೆ ಹಾಗೂ ಸಂಚಾರ ವ್ಯಾಪ್ತಿಯ ವಿಸ್ತರಣೆಯ ಕುರಿತು ಸ್ಥಳೀಯ ತಹಶೀಲ್ದಾರರು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.
ಕರ್ನಾಟಕದ ವಾಯು ಮಾಲಿನ್ಯ ತಪಾಸಣಾ ಪತ್ರಕ್ಕೆ ಗೋವಾದಲ್ಲಿ ಮಾನ್ಯತೆ ನೀಡದ ಕುರಿತು ಅಲ್ಲಿನ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು. ಜೊತೆಗೆ, ಟ್ಯಾಕ್ಸಿಗಳಲ್ಲಿನ ಪ್ಯಾನಿಕ್ ಬಟನ್ ಸಮಸ್ಯೆ ಹಾಗೂ ವಾಯು ಮಾಲಿನ್ಯ ಪತ್ರವನ್ನು ಆನ್‌ಲೈನ್‌ನಲ್ಲಿ ದಾಖಲಿಸುವ ವಿಷಯವನ್ನು ರಾಜ್ಯ ಸಾರಿಗೆ ಆಯುಕ್ತಾಲಯದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಜಿಲ್ಲೆಯ ಸುಮಾರು 400ಕ್ಕೂ ಅಧಿಕ ಹೊಸ ಮಾರ್ಗಗಳಲ್ಲಿ ಸರ್ಕಾರಿ ಬಸ್‌ಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ಅನುಮೋದನೆ ನೀಡಿದ್ದಾರೆ. ಆದರೆ, ದುರ್ಗಮ ರಸ್ತೆಗಳು ಮತ್ತು ಅಪಘಾತ ವಲಯಗಳಲ್ಲಿ (ಬ್ಲಾಕ್‌ಸ್ಪಾಟ್‌ಗಳು) ವಾಹನ ಚಾಲನೆ ಮಾಡುವಾಗ ಚಾಲಕರು ಅತ್ಯಂತ ಜಾಗರೂಕತೆಯಿಂದ ಇರಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ವಿವಿಧ ತಾಲೂಕುಗಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಆಟೋ-ಟ್ಯಾಕ್ಸಿ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.





