ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪರೀಕ್ಷಾ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಜಿಲ್ಲೆಯ 73 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 19,988 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಬಾರಿ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡಿದ್ದು, ಪರೀಕ್ಷೆಗೆ ನೊಂದಾಯಿಸಿಕೊಂಡಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಹಾಜರಾಗುವಂತೆ ನೋಡಿಕೊಳ್ಳಬೇಕು. ಹಾಜರಾತಿ ಶೇ. 100ರಷ್ಟಾದರೆ ಫಲಿತಾಂಶವೂ ಉತ್ತಮವಾಗಿ ಬರಲು ಸಾಧ್ಯ ಎಂದು ಅವರು ಆಶಯ ವ್ಯಕ್ತಪಡಿಸಿದರು.
ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿ ಬಸ್‌ಗಳನ್ನು ನಿಗಧಿತ ಸಮಯದಲ್ಲಿ ಮತ್ತು ಬೇಡಿಕೆಗೆ ಅನುಗುಣವಾಗಿ ಓಡಿಸಲು ಸೂಚಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮುಂಚಿತವಾಗಿಯೇ ತಲುಪಲು ಬಸ್ ಸಮಯವನ್ನು ಸರಿಯಾಗಿ ನಿಗದಿಪಡಿಸಬೇಕು ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಡುಗೆ ಅನಿಲ (ಗ್ಯಾಸ್) ಕೊರತೆ ಇಲ್ಲ: ಆತಂಕ ಬೇಡ ಎಂದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಅಲ್ಲದೆ, ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮತ್ತು ಪರೀಕ್ಷಾ ಸಮಯದಲ್ಲಿ ವಿದ್ಯುತ್ ಕಡಿತವಾಗದಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ತಾಪಮಾನ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಎಲ್ಲಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಬೇಕು. ತುರ್ತು ಸಂದರ್ಭಗಳಿಗಾಗಿ ಓ.ಆರ್.ಎಸ್ (ORS) ಪಾಕೆಟ್‌ಗಳನ್ನು ಲಭ್ಯವಿರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪರೀಕ್ಷಾ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ಜಿ.ಪಿ.ಎಸ್ ಅಳವಡಿಸಿದ ವಾಹನಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ ಸಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಪ್ರಕ್ರಿಯೆಯು ಆನ್‌ಲೈನ್‌ನಲ್ಲಿ ನಡೆಯುವುದರಿಂದ ಇಂಟರ್ನೆಟ್ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು.
ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಮತ್ತು ವೆಬ್ ಕಾಸ್ಟಿಂಗ್ ಕಡ್ಡಾಯಗೊಳಿಸಲಾಗಿದೆ. ಪರೀಕ್ಷಾ ಕೊಠಡಿಯೊಳಗೆ ಮೊಬೈಲ್, ಬ್ಲೂಟೂತ್ ಸಾಧನಗಳು ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಅನುಮತಿಸುವುದಿಲ್ಲ ಮತ್ತು ಫೋಟೋಗ್ರಫಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ದಿಲೀಶ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲತಾ ನಾಯ್ಕ ಹಾಗೂ ವಿವಿಧ ತಾಲೂಕುಗಳ ತಹಸೀಲ್ದಾರ್‌ಗಳು ಉಪಸ್ಥಿತರಿದ್ದರು.





