ಉತ್ತರ ಕನ್ನಡ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗೃಹಬಳಕೆಯ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿತ್ತು. ಆದರೆ, ಜಿಲ್ಲೆಯಲ್ಲಿ ಅನಿಲ ಪೂರೈಕೆ ವ್ಯವಸ್ಥೆ ಎಂದಿನಂತೆ ಸುಗಮವಾಗಿ ನಡೆಯುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಗೊಂದಲ ಅಥವಾ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಸ್ಪಷ್ಟಪಡಿಸಿದ್ದಾರೆ.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅನಿಲ ಸರಬರಾಜು ಮಾಡುವ ಕಂಪನಿಗಳ ಅಧಿಕಾರಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ.
ಜಿಲ್ಲೆಗೆ ಅನಿಲ ಪೂರೈಸುವ ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಮತ್ತು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಕಂಪನಿಗಳ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ಸಮಾಲೋಚನೆ ನಡೆಸಿದ ಅವರು, ಜಿಲ್ಲೆಯ ದೈನಂದಿನ ಬೇಡಿಕೆಗೆ ಅನುಗುಣವಾಗಿ ಅನಿಲ ಪೂರೈಕೆ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ ? ಶಿರಸಿ | ರಾಜ್ಯದ ಜಿಎಸ್ಟಿ ಪಾಲು ಕೊಡಿಸಲು ಬಿಜೆಪಿ ನಾಯಕರು ತಮ್ಮ ತಾಕತ್ತು ತೋರಿಸಲಿ: ಭೀಮಣ್ಣ ನಾಯ್ಕ ವಾಗ್ದಾಳಿ
ಸಭೆಯಲ್ಲಿ ಪ್ರತಿಕ್ರಿಯಿಸಿದ ತೈಲ ಕಂಪನಿಗಳ ಅಧಿಕಾರಿಗಳು, ಅನಿಲ ಸರಬರಾಜಿನಲ್ಲಿ ಯಾವುದೇ ಅಡಚಣೆ ಇಲ್ಲ ಎಂದು ಭರವಸೆ ನೀಡಿದ್ದಾರೆ. ಕಳೆದ ಒಂದು ದಿನವಷ್ಟೇ ಮುಂಗಡ ಬುಕ್ಕಿಂಗ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು, ಆದರೆ ಪ್ರಸ್ತುತ ಅದನ್ನು ಸರಿಪಡಿಸಲಾಗಿದೆ.
ಸಾರ್ವಜನಿಕರು ಕೇವಲ ಮಿಸ್ ಕಾಲ್ ಮೂಲಕವೇ ಬುಕ್ಕಿಂಗ್ ಮಾಡಲು ಕಾಯದೇ, ಐ.ವಿ.ಆರ್.ಎಸ್, ವಾಟ್ಸಾಪ್, ಮೊಬೈಲ್ ಅಪ್ಲಿಕೇಶನ್ ಹಾಗೂ ಪಾವತಿ ಆಪ್‌ಗಳಂತಹ ಪರ್ಯಾಯ ಮಾರ್ಗಗಳನ್ನು ಬಳಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಮುಖ್ಯವಾಗಿ ಅಂಗನವಾಡಿಗಳು, ಶಾಲೆಗಳು, ಆಸ್ಪತ್ರೆಗಳು, ಸರ್ಕಾರಿ ಹಾಸ್ಟೆಲ್‌ಗಳು ಮತ್ತು ಇಂದಿರಾ ಕ್ಯಾಂಟೀನ್‌ಗಳಿಗೆ ಅಡುಗೆ ಅನಿಲದ ಕೊರತೆಯಾಗದಂತೆ ಆದ್ಯತೆಯ ಮೇರೆಗೆ ಸರಬರಾಜು ಮಾಡಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ವಿತರಣೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಜನರಲ್ಲಿ ವಿನಂತಿಸಿದ್ದಾರೆ.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.





