ಉತ್ತರ ಕನ್ನಡ: ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ತಪ್ಪದೇ ಚಲಾಯಿಸುವ ಮೂಲಕ ಸಮರ್ಥ ಜನಪ್ರತಿನಿಧಿಯನ್ನು ಆಯ್ಕೆ ಮಾಡಿ, ಸುಭದ್ರ ದೇಶ ನಿರ್ಮಾಣ ಮಾಡಬೇಕು ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಬಿ.ಎಲ್. ಅವರು ಕರೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ. ವಿದ್ಯಾದಾನ ಮತ್ತು ರಕ್ತದಾನದಷ್ಟೇ ಮತದಾನವು ಶ್ರೇಷ್ಠವಾದುದಾಗಿದೆ. ಯಾವುದೇ ಆಸೆ-ಆಮಿಷ ಅಥವಾ ಒತ್ತಡಗಳಿಗೆ ಮಣಿಯದೆ ಪಾರದರ್ಶಕವಾಗಿ ಮತ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ.
ಪ್ರಜಾಪ್ರಭುತ್ವ ವ್ಯವಸ್ಥೆಯು ನಮಗೆ ನಮ್ಮ ನಾಯಕನನ್ನು ಆಯ್ಕೆ ಮಾಡುವ ಅಧಿಕಾರ ನೀಡಿದ್ದು, ಯುವಜನತೆ ಈ ಪ್ರಕ್ರಿಯೆಯಿಂದ ದೂರ ಉಳಿಯಬಾರದು ಎಂದು ಅವರು ಕಿವಿಮಾತು ಹೇಳಿದರು.
ಜಿಲ್ಲೆಯಲ್ಲಿ ಮಹಿಳಾ ಮತದಾರರೇ ಅಧಿಕ: ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 12.28 ಲಕ್ಷ ಮತದಾರರಿದ್ದು, ಈ ಪೈಕಿ ಮಹಿಳಾ ಮತದಾರರ ಸಂಖ್ಯೆಯೇ ಹೆಚ್ಚಿದೆ ಎಂದು ತಿಳಿಸಿದರು.
ಜಿಲ್ಲೆಯ 1445 ಮತಗಟ್ಟೆಗಳಲ್ಲಿ ಬಿ.ಎಲ್.ಓ.ಗಳನ್ನು ನೇಮಕ ಮಾಡಲಾಗಿದ್ದು, ಅರ್ಹ ಮತದಾರರ ಪಟ್ಟಿಗೆ ಸೇರ್ಪಡೆ ಮತ್ತು ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಕಳೆದ ಒಂದು ವರ್ಷದಲ್ಲಿ 24,000ಕ್ಕೂ ಹೆಚ್ಚು ಯುವ ಮತದಾರರು ಪಟ್ಟಿಗೆ ಸೇರ್ಪಡೆಗೊಂಡಿದ್ದು, 13,000ಕ್ಕೂ ಅಧಿಕ ಹಿರಿಯ ನಾಗರಿಕ ಮತದಾರರು ಜಿಲ್ಲೆಯಲ್ಲಿದ್ದಾರೆ ಎಂದು ಅವರು ವಿವರ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಮುಕ್ತ ಮತ್ತು ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆ ಕೈಗೊಳ್ಳುವ ಸುರಕ್ಷತಾ ಕ್ರಮಗಳ ಬಗ್ಗೆ ವಿವರಿಸಿದರು. ದಿನಪತ್ರಿಕೆಗಳನ್ನು ಓದುವ ಮೂಲಕ ಸಾಮಾಜಿಕ ಸಮಸ್ಯೆಗಳನ್ನು ಅರಿತು, ಅವುಗಳಿಗೆ ಸ್ಪಂದಿಸುವ ಪ್ರತಿನಿಧಿಗಳನ್ನು ಆರಿಸುವಂತೆ ಅವರು ಜನರಲ್ಲಿ ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ವೈದ್ಯರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ; ವಿಡಿಯೋ ವೈರಲ್ ಮಾಡಿದ್ದ ಮೂವರ ಬಂಧನ
ಇದೇ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿ.ಎಲ್.ಓ.ಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಯುವ ಮತದಾರರಿಗೆ ಎಪಿಕ್ ಕಾರ್ಡ್‌ಗಳನ್ನು ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸ್ವಾಗತಿಸಿ, ತಹಸೀಲ್ದಾರ್ ನಿಶ್ಚಲ್ ನರೋನ್ಹಾ ವಂದಿಸಿದರು.





