ಒಂದೆಡೆ ಉಡುಪಿ ಜಿಲ್ಲಾಡಳಿತ ಹಾಗೂ ಉಡುಪಿ ಪೊಲೀಸ್ ಇಲಾಖೆ ಮಾದಕ ವಸ್ತು ಸೇವನೆ ನಿರ್ಮೂಲನೆಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಭರದಿಂದ ನಡೆಸುತ್ತಿದ್ದರೆ, ಇತ್ತ ಬೈಂದೂರು ತಾಲ್ಲೂಕಿನ ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದೂರು ಗ್ರಾಮದ ಉದಯನಗರದಲ್ಲಿರುವ ಕೊರಗರ ಸಭಾಭವನವು ಮಾದಕ ವ್ಯಸನಿಗಳ ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿರುವುದಾಗಿ ಗಂಭೀರ ಆರೋಪಗಳು ಕೇಳಿಬಂದಿವೆ.

ಈ ಕುರಿತು ಈದಿನ.ಕಾಮ್‌ಗೆ ಪ್ರತಿಕ್ರಿಯೆ ನೀಡಿದ ಉಡುಪಿ ಜಿಲ್ಲಾ ದೌರ್ಜನ್ಯ ತಡೆ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯ ವಾಸುದೇವ ಮುದೂರು ಅವರು, ಐಟಿಡಿಪಿ ಇಲಾಖೆಯ ಅನುದಾನದಲ್ಲಿ ನಿರ್ಮಿಸಲಾದ ಈ ಸಭಾಭವನಕ್ಕೆ ಸೂಕ್ತ ನಿರ್ವಹಣೆ ಇಲ್ಲದಿರುವುದೇ ಸಮಸ್ಯೆಗೆ ಮೂಲ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಭವನವನ್ನು ಸ್ಥಳೀಯಾಡಳಿತದ ಮೇಲ್ವಿಚಾರಣೆಗೆ ಒಪ್ಪಿಸದೆ, ಕೆಲವು ವ್ಯಕ್ತಿಗಳು ಬೀಗ ಹಾಕಿ ತಮ್ಮ ಸ್ವಂತ ಆಸ್ತಿಯಂತೆ ಬಳಸುತ್ತಿರುವುದು ಕಂಡುಬಂದಿದೆ ಎಂದು ಅವರು ಆರೋಪಿಸಿದ್ದಾರೆ.

ರಾತ್ರಿ ವೇಳೆಯಲ್ಲಿ ಅಪರಿಚಿತ ವ್ಯಕ್ತಿಗಳು ಹಾಗೂ ಯುವಕರ ಗುಂಪುಗಳು ಇಲ್ಲಿ ಸೇರಿಕೊಂಡು ಅಮಲು ಪದಾರ್ಥಗಳನ್ನು ಸೇವಿಸುತ್ತಿರುವುದಾಗಿ ಸ್ಥಳೀಯರು ದೂರಿದ್ದಾರೆ. ಈ ಪರಿಸ್ಥಿತಿಯಿಂದ ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ಮತ್ತು ವೃದ್ಧರು, ಆ ಪ್ರದೇಶದಲ್ಲಿ ಸಂಚರಿಸಲು ಭಯಪಡುವಂತಾಗಿದೆ ಎಂದು ಕೆಲ ನಿವಾಸಿಗಳು ತಿಳಿಸಿದ್ದಾರೆ.
ಕೊರಗ ಸಮುದಾಯದ ಅಭಿವೃದ್ಧಿಗಾಗಿ ನಿರ್ಮಿಸಲಾದ ಸರ್ಕಾರಿ ಭವನವೇ ಅಕ್ರಮ ಚಟುವಟಿಕೆಗಳ ಕೇಂದ್ರವಾಗುತ್ತಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಭವನದ ನಿರ್ವಹಣೆಯನ್ನು ಜಡ್ಕಲ್ ಗ್ರಾಮ ಪಂಚಾಯತ್‌ಗೆ ವಹಿಸಿ, ಸಮುದಾಯದ ಸಾರ್ವಜನಿಕ ಕಾರ್ಯಕ್ರಮಗಳಿಗೆ ಮಾತ್ರ ಸೀಮಿತಗೊಳಿಸುವಂತೆ ಜಿಲ್ಲಾಡಳಿತಕ್ಕೆ ಆಗ್ರಹಿಸಲಾಗಿದೆ.

ಸ್ಥಳೀಯ ಕೊರಗ ಸಮುದಾಯದ ಗೋಪಾಲ, ಸೂಲ್ಯ ಹಾಗೂ ಲಿಂಗ ಸೇರಿದಂತೆ ಹಲವರು, ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಕ್ರಮ ಚಟುವಟಿಕೆಗಳನ್ನು ನಿಲ್ಲಿಸಿ, ಭವನದ ಸುರಕ್ಷಿತ ಬಳಕೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಸರಿಯಾದ ನಿರ್ವಹಣೆ ಮತ್ತು ಮೇಲ್ವಿಚಾರಣೆ ಜಾರಿಯಾದಲ್ಲಿ ಅಳಿವಿನಂಚಿನಲ್ಲಿರುವ ಕೊರಗ ಸಮುದಾಯದ ಹಿತ ಕಾಯುವುದರ ಜೊತೆಗೆ ಯುವ ಸಮುದಾಯವನ್ನು ಮಾದಕ ವ್ಯಸನದಿಂದ ದೂರ ಇಡುವುದು ಸಾಧ್ಯವಾಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.





