ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ನಿರ್ಮೂಲನಾ ಘಟಕಗಳನ್ನು ಸ್ಥಾಪಿಸಿ, ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು. ಈ ಘಟಕಗಳಿಗೆ ಕಾಲಕಾಲಕ್ಕೆ ಅಗತ್ಯ ಸಲಹೆ, ಸೂಚನೆ ನೀಡುವ ಮೂಲಕ ಹಾಗೂ ಚರ್ಚೆ, ಪ್ರಬಂಧ, ರಸಪ್ರಶ್ನೆಗಳಂತಹ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳನ್ನು ಆಯೋಜಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ ಆನಂದ. ಕೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ನಿರ್ಮೂಲನ ಘಟಕ ಸ್ಥಾಪನೆ ಮಾಡಿ ವಿವಿಧ ಜಾಗೃತಿ ಕಾರ್ಯಕ್ರಮ ಮೂಲಕ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು” ಎಂದರು.
ಇದನ್ನೂ ಓದಿ: ವಿಜಯಪುರ | ಶಾಸಕರಿಗೆ ದೆಹಲಿ ಹೋಗುವ ಅಧಿಕಾರವಿದೆ: ಸಚಿವ ಎಂ ಬಿ ಪಾಟೀಲ
ಎಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಪದವಿ ಪೂರ್ವ, ಪದವಿ ಕಾಲೇಜು, ಪ್ರಾಂಶುಪಾಲರು ಹಾಗೂ ವಸತಿ ನೆಲೆಗಳ ವಾರ್ಡನ್ ಗಳಿಗೆ ಡಿಸೆಂಬರ್ ಮೊದಲನೇ ವಾರದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಒಂದು ದಿನದ ಕಾರ್ಯಾಗಾರ ಆಯೋಜಿಸಬೇಕು. ಪೋಕ್ಸೋ ಕಾಯ್ದೆ, ಕೊಟ್ಪ ಕಾಯ್ದೆ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಗಳು, ಸೈಬರ್ ಕ್ರೈಂ, ಮಾದಕ ದ್ರವ್ಯಗಳ ಸೇವನೆ, ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಆಯಾ ವಿಷಯಗಳ ಪರಿಣಿತ ತಜ್ಞರು, ಸಂಪನ್ಮೂಲ ವ್ಯಕ್ತಿಗಳ ಮೂಲಕ ಉಪನ್ಯಾಸ ಕೊಡಿಸಬೇಕು. ಮಕ್ಕಳಲ್ಲಿ ಜಾಗೃತಿ ಮೂಡಿಸಲು ಕ್ರಮ ವಹಿಸಬೇಕು” ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ನಿರ್ದೇಶಿಸಿದರು.





