ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಕ್ರಮವಾಗಿ ಮದ್ಯ ಮಾರುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಹಿಳೆಯರು ಹಾಗೂ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ದೇವರಹಿಪ್ಪರಗಿಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಪ್ರಕಾಶ ಸಿಂದಗಿ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ದಸಂಸ ಮುಖಂಡ ರಾವುತ ತಳಕೇರಿ ಮಾತನಾಡಿ, “ಸುಮಾರು ವರ್ಷಗಳಿಂದ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ. ಕಿರಾಣಿ ಅಂಗಡಿ, ಪಾನ್ ಶಾಪ್‌ಗಳಲ್ಲಿ ನಿರ್ಭಯವಾಗಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಸಿಂದಗಿ ತಾಲೂಕು ಅಬಕಾರಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಕೂಡಲೇ ಅಕ್ರಮ ಮದ್ಯ ಮಾರಾಟಗಾರರ ಮೇಲೆ ಶಿಸ್ತು ಕ್ರಮ ಜರುಗಿಸಿ, ಮದ್ಯ ಮಾರಾಟ ಬಂದ್ ಮಾಡಿಸಬೇಕು. ಕ್ರಮ ಕೈಗೊಳ್ಳಲು ನಿರ್ಲಕ್ಷ್ಯ ಧೋರಣೆ ತೋರುತ್ತಿರುವ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಹಕ್ಕೊತ್ತಾಯ ಸ್ವೀಕರಿಸಿದ ತಹಶೀಲ್ದಾರ್ ಪ್ರಕಾಶ ಸಿಂದಗಿ, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ರೇಣುಕಾ ಕಟ್ಟಿಮನಿ, ಯಲ್ಲವ್ವ ಮಾದರ, ಸಾವಿತ್ರಿ ಕಟ್ಟಿಮನಿ, ಭೀಮವ್ವ ಮಾದರ, ಮಾನಂದಾ ಕಟ್ಟಿಮನಿ, ಯಲ್ಲವ್ವ ಕನ್ನೋಳ್ಳಿ, ಸೋಮವ್ವ ರತ್ನಾಕರ, ಭಾರತಿ ಭಾವಿಮನಿ, ರುಕ್ಕವ್ವ ಕಟ್ಟಿಮನಿ, ನಂದವ್ವ ಹೊಸಮನಿ, ಚಂದ್ರವ್ವ ಭಾವಿಮನಿ, ಚಂದ್ರವ್ವ ಕನ್ನೊಳ್ಳಿ, ಅನಿತಾ ಭಾವಿಮನಿ, ರವಿ ಶಿರವಾಳ ಇದ್ದರು.




