ಇಂದಿನ ವೃತ್ತಿಪರ ಬದುಕಿನಲ್ಲಿ ಕೌಶಲ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅನಿವಾರ್ಯವೂ ಆಗಿದೆ ಎಂದು ಎಆರ್‌ಎಸ್ ಮಹಿಳಾ ಮಹಾವಿದ್ಯಾಲಯದ ಉಪ ಪ್ರಾಂಶುಪಾಲ ಡಾ. ಹಾಜರಾ ಪರ್ವಿನ್ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪೇಪರ್ ಪುನರುತ್ಪಾದನಾ ಘಟಕ ಹಾಗೂ ಸಿಕ್ಯಾಬ್ ಸಂಸ್ಥೆಯ ಎಆರ್ಎಸ್ ಇನಾಮದಾರ ಮಹಿಳಾ ಮಹಾವಿದ್ಯಾಲಯದ ವತಿಯಿಂದ ಇತ್ತೀಚಿಗೆ ಹಮ್ಮಿಕೊಂಡಿದ್ದ “ಉದ್ಯೋಗಕತೆ ಮತ್ತು ಹೊಸ ವೃತ್ತಿ ಅವಕಾಶಗಳಿಗೆ ಕೌಶಲ್ಯ ಅಭಿವೃದ್ಧಿ” ವಿಷಯದ ಕುರಿತ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶೈಕ್ಷಣಿಕ ಜ್ಞಾನದ ಜೊತೆಗೆ ವೃತ್ತಿಗೆ ಅಗತ್ಯವಿರುವ ಕೌಶಲ್ಯಗಳನ್ನು ಕರಗತ ಮಾಡಿಕೊಂಡರೆ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ, ವಿಜಯಪುರದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಜಯಪುರ ಸ್ಥಾನಿಕ ಕಚೇರಿಯ ಪರಿಸರ ಅಧಿಕಾರಿ ವಿವೇಕ್ ಗುಣಗ ಮಾತನಾಡಿ, “ಪರಿಸರ ಸಮಸ್ಯೆಗಳು ತೀರಾ ಹೆಚ್ಚುತ್ತಿರುವ ಇಂದಿನ ಸಂದರ್ಭದಲ್ಲಿ ತ್ಯಾಜ್ಯ ನಿರ್ವಹಣಾ ಕ್ಷೇತ್ರದಲ್ಲಿ ಮುಂಬರುವ ದಿನಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗುವ ಸಾಧ್ಯತೆ ಇದೆ” ಎಂದು ಹೇಳಿದರು.
ಇದನ್ನೂ ಓದಿ: ವಿಜಯಪುರ | 112 ನಗರ ಸಾರಿಗೆ ವಾಹನಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಹುಬ್ಬಳ್ಳಿಯ ಕೀರ್ತಿ ಪೇಪರ್ಸ್ ಪ್ರೈ.ಲಿನ ಸಿಬ್ಬಂದಿ ನಿಂಗಪ್ಪ ಗೋಂದಿ, ವಿದ್ಯಾರ್ಥಿಗಳಿಗೆ ಕಾಗದದ ಕೈಚೀಲ ತಯಾರಿಕೆಯ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು. ಕಾಗದದ ಕೈಚೀಲ ತಯಾರಿಕೆ ಕ್ಷೇತ್ರದಲ್ಲಿಯೂ ಸ್ವಯಂ ಉದ್ಯಮಿಗಳಾಗಿ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬಹುದು ಎಂದು ಹೇಳಿದರು.
ಗದಗಿನ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕ ರಾಮಚಂದ್ರ ಹೆಗಡೆ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ವೃತ್ತಿಪರ ಕೌಶಲ್ಯಗಳ ಜೊತೆಗೆ ಭಾಷಾ ಹಾಗೂ ವ್ಯಾಕರಣ ಕೌಶಲ್ಯಗಳ ಕುರಿತು ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥ ಡಾ. ಎಂಎಂ ಬಾಗಲಕೋಟ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ವಿದ್ಯಾವತಿ ಬೆನ್ನೂರು, ಇತಿಹಾಸದ ಪ್ರಾಧ್ಯಾಪಕ ಡಾ. ಮುಷ್ತಾಕ್ ಅಹ್ಮದ್, ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.





