ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ)ಯಡಿ ಪ್ರಗತಿ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೂಡಲೇ ಪೂರ್ಣಗೊಳಿಸಬೇಕು ಎಂದು ಜಿ.ಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.
ವಿಜಯಪುರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಮನರೇಗಾ ಕಾಯ್ದೆಯ ನಾನಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಗ್ರಾಪಂಗಳಿಗೆ ಬಿಡುಗಡೆ ಮಾಡಿರುವ ಸಾಮಗ್ರಿ ವೆಚ್ಚದ ಅನುದಾನವನ್ನು ವಿಳಂಬ ಮಾಡದೆ ಇದೇ ಮಾರ್ಚ್ 16ನೇ ತಾರೀಖಿನೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು” ಎಂದು ಹೇಳಿದರು.
“ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನೋಂದಾಯಿಸಲ್ಪಟ್ಟ ಎಲ್ಲ ಕೂಲಿಕಾರರ ಇಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಮುಖ್ಯವಾಗಿ ಸಕ್ರಿಯ ಕೂಲಿಕಾರರ ಇಕೆವೈಸಿಯನ್ನು ಕಡ್ಡಾಯವಾಗಿ ಮಾ.17ನೇ ತಾರೀಖಿನೊಳಗೆ ಶೇ.100 ರಷ್ಟು ಪೂರ್ಣಗೊಳಿಸಬೇಕು” ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು.
“ಪ್ರತಿ ಗ್ರಾ.ಪಂಗಳಲ್ಲಿ ನರೇಗಾ ಯೋಜನೆಯಡಿ ಚಾಲ್ತಿಯಲ್ಲಿರುವ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಕೂಲಿಕಾರರ ಮುಖ ದೃಢೀಕರಣ ಮಾಡಿಸಬೇಕು. ಈಗಾಗಲೇ ಬೇಸಿಗೆ ಆರಂಭವಾಗಿರುವುದರಿಂದ ಗ್ರಾಮೀಣ ಜನರಿಗೆ ಉದ್ಯೋಗದ ಅವಶ್ಯಕತೆಯಿದೆ. ಅಂತಹವರಿಗೆ ಗ್ರಾ.ಪಂ ವತಿಯಿಂದ ಕಡ್ಡಾಯವಾಗಿ ಉದ್ಯೋಗ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ” ಎಂದರು.
“ಪ್ರಸ್ತುತ ಸಾಲಿನಲ್ಲಿ ವಿಜಯಪುರ ಜಿಲ್ಲೆಗೆ 29 ಲಕ್ಷ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿದೆ. ಈಗಾಗಲೇ 23.90 ಲಕ್ಷ ಮಾನವ ದಿನಗಳ ಸೃಜನೆಯಾಗಿದೆ. ಪ್ರಸ್ತುತ ವರ್ಷ ಮುಕ್ತಾಯಗೊಳ್ಳಲು ಕೆಲವು ದಿನಗಳ ಮಾತ್ರ ಬಾಕಿ ಇರುತ್ತದೆ. ಆದ್ದರಿಂದ ಬಾಕಿ ಉಳಿದ ಮಾನವ ದಿನಗಳನ್ನು ಸೃಜನೆ ಮಾಡಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು” ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಸ್ ನಿಲ್ದಾಣಗಳ ಎಲ್‌ಇಡಿ ಪರದೆ ಮೇಲೆ ಬಜೆಟ್ ನೇರ ಪ್ರಸಾರ
“ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಕ್ಷೇತ್ರ ಮಟ್ಟದಲ್ಲಿ ಅತ್ಯಂತ ಕ್ರಿಯಾಶೀಲರಾಗಿ ತಮ್ಮ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಬೇಕು” ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ. ಸಹಾಯಕ ಯೋಜನಾಧಿಕಾರಿ ಆರುಣಕುಮಾರ ದಳವಾಯಿ, ಜಿಲ್ಲೆಯ ಎಲ್ಲ ತಾಲೂಕುಗಳ ಸಹಾಯಕ ನಿರ್ದೇಶಕರು(ಗ್ರಾ.ಉ), ಜಿ.ಪಂ. ನ ಅಭಿವೃದ್ಧಿ ಶಾಖೆಯ ಅಧೀಕ್ಷಕರು, ಎ.ಡಿ.ಪಿ.ಸಿ, ಜಿಲ್ಲಾ ಎಂ.ಐ.ಎಸ್. ಸಂಯೋಜಕರು, ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್, ಜಿಲ್ಲಾ ಐಇಸಿ ಸಂಯೋಜಕರು, ಜಿ.ಪಂ.ನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ತಾಲೂಕು ಎಮ್.ಐ.ಎಸ್ ಸಂಯೋಜಕರು, ಐಇಸಿ ಸಂಯೋಜಕರು, ಆಡಳಿತ ಸಹಾಯಕರು ಇದ್ದರು.





