ಅತಿಹೆಚ್ಚು ತಾಪಮಾನ ಸಮಯದಲ್ಲಿ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಲು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನೀಡಲಾದ ಸಲಹೆ ಸೂಚನೆಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, “ರಾಜ್ಯದ ಕೆಲ ಜಿಲ್ಲೆಗಳಲ್ಲಿ 3 ರಿಂದ 6 ದಿನಗಳವರೆಗೆ ಬಿಸಿಗಾಳಿಯ ಪ್ರಭಾವ ಕಂಡುಬರುವ ಸಾಧ್ಯತೆಯಿದೆ. ತೀವ್ರ ತಾಪಮಾನವು ಸಾರ್ವಜನಿಕರ ಆರೋಗ್ಯದ ಮೇಲೆ, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಬಹುದು. ಬಿಸಿಲಿನಿಂದ ಉಂಟಾಗುವ ಬಳಲಿಕೆ, ನಿರ್ಜಲೀಕರಣ ಮತ್ತು ಹೀಟ್ ಸ್ಟ್ರೋಕ್ ತಡೆಗಟ್ಟಲು ಸಾರ್ವಜನಿಕರು ಗಮನ ಹರಿಸಬೇಕು” ಎಂದು ತಿಳಿಸಿದ್ದಾರೆ.
“ಗರಿಷ್ಠ ತಾಪಮಾನದ ಅವಧಿಯಲ್ಲಿ ಅದರಲ್ಲೂ ಮಧ್ಯಾಹ್ನ 12 ರಿಂದ 3ರವರೆಗೆ ಹೆಚ್ಚು ಬಿಸಿಲಿರುವ ಕಾರಣ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವ ಅನಿವಾರ್ಯತೆಯಿದ್ದರೆ ರಕ್ಷಣೆಗಾಗಿ ಕನ್ನಡಕ, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು. ಹೊರಗಿನ ಉಷ್ಣತೆ ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ನಿಲ್ಲಿಸಬೇಕು” ಎಂದು ಸಲಹೆ ನೀಡಿದ್ದಾರೆ.
“ಪೂರ್ವಾಹ್ನ 11ರಿಂದ ಸಂಜೆ 4ರ ಅವಧಿಯಲ್ಲಿ ಹೊರಾಂಗಣ ಸಭೆಗಳು, ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆ ನೀಡಲು ಅಗತ್ಯ ಶಾಮಿಯಾನ, ಪೆಂಡಾಲ್ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಯ ವ್ಯವಸ್ಥೆ ಖಚಿತಪಡಿಸಿಕೊಳ್ಳಬೇಕು. ಸಭಿಕರಿಗೆ ಕಡ್ಡಾಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು” ಎಂದು ತಿಳಿಸಿದ್ದಾರೆ.
“ಹೆಚ್ಚಿನ ನೀರಿನಂಶ ಹೊಂದಿರುವ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ತರಕಾರಿ ಸೊಪ್ಪು, ಎಳನೀರು ಹೆಚ್ಚಾಗಿ ಸೇವಿಸಬೇಕು. ಜತೆಗೆ ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರಿಡಬೇಕು. ಮನೆ ತಂಪಾಗಿರಿಸಲು ಪರದೆ, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಬೇಕು. ಹೊರಗೆ ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್ ಫ್ಯಾನ್ ಕಿಟ್ ಒಯ್ಯಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಾ.9ರಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಕುರಿತ ʼಭೀಮ ಗಾಯನʼ
“ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸಬೇಕು” ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





