ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.
ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತರು ಅಸ್ಸಾಂ ಮೂಲದವರಾಗಿದ್ದಾರೆ. ಅವರು ಲೇಬರ್ ಶೆಡ್‌ನಲ್ಲಿ ಮಲಗಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಜಯಂತ್ ಸಿಂಧೆ (25), ನೀರೇಂದ್ರನಾಥ್ (24), ಡಾಕ್ಟರ್ ಟೈಡ್ (25) ಹಾಗೂ ಧನಂಜಯ್ ಟೈಡ್ (20) ಎಂದು ಗುರುತಿಸಲಾಗಿದೆ. ನಾಲ್ವರೂ ರಾತ್ರಿ ಶೆಡ್‌ನ ಕಿಟಕಿ ಮತ್ತು ಬಾಗಿಲುಗಳನ್ನು ಸಂಪೂರ್ಣವಾಗಿ ಮುಚ್ಚಿ ಅಡುಗೆ ಮಾಡಿದ್ದರು. ಅದೇ ಕಾರಣಕ್ಕೆ ಅವರು ಉಸಿರುಗಟ್ಟಿ ಸಾವನ್ನಪ್ಪಿರಬಹುದು ಎಂದು ಅನುಮಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಸೂಲಿಬೆಲೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




