ಎಸ್ಎಸ್ಎಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡಬೇಕಾದ ಅಗತ್ಯ ಇಲ್ಲ. ಆತ್ಮವಿಶ್ವಾಸದಿಂದ ಹಾಗೂ ಸಮರ್ಪಕವಾಗಿ ಸಿದ್ಧತೆ ಮಾಡಿಕೊಂಡರೆ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಹೇಳಿದರು.
ನಗರದಲ್ಲಿ ‘ಕನ್ನಡ ಪ್ರಭ’ ದಿನಪತ್ರಿಕೆ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಿದ್ಧತೆ ಕುರಿತ ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ ಮಾತನಾಡಿ ಅವರು ‘ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಲು ಶಿಕ್ಷಣ ಇಲಾಖೆ ಪೂರ್ವ ಸಿದ್ಧತಾ ಪರೀಕ್ಷೆ, ವಿಶೇಷ ತರಗತಿಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ’ ಎಂದು ಅವರು ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ತಾಲೂಕು ಹಾಗೂ ಸ್ಥಳೀಯ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.
‘ಮಕ್ಕಳು ಮನೆಯಲ್ಲಿ ಓದುವ ವಾತಾವರಣವನ್ನು ಪಾಲಕರು ಕಲ್ಪಿಸಬೇಕು. ಜೊತೆಗೆ ಮೊಬೈಲ್ ಹಾಗೂ ಟಿವಿಯಿಂದ ಮಕ್ಕಳನ್ನು ದೂರವಿರಿಸುವಂತೆ ಗಮನ ಹರಿಸಬೇಕು’ ಎಂದು ಮನವಿ ಮಾಡಿದರು. ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಅವರು ಶುಭಾಶಯ ಕೋರಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳಿಂದ ವಿದ್ಯಾರ್ಥಿಗಳು ಹಾಗೂ ಪಾಲಕರು ಕರೆಮಾಡಿ ಪರೀಕ್ಷಾ ಸಿದ್ಧತೆ, ಓದು ವಿಧಾನ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರಶ್ನೆಗಳನ್ನು ಕೇಳಿ ತಮ್ಮ ಸಂದೇಹಗಳನ್ನು ನಿವಾರಿಸಿಕೊಂಡರು. ಈ ವೇಳೆ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳವಾಗಲಿ’ ಎಂದು ಪಾಲಕರು ಆಶಾಭಾವನೆ ವ್ಯಕ್ತಪಡಿಸಿದರು
ಇದನ್ನು ಓದಿದ್ದೀರಾ? ಕಲಬುರಗಿ | ಡಾ. ಬಿ ಆರ್ ಅಂಬೇಡ್ಕರ್ ಭೇಟಿ ಸ್ಥಳ ಕಡೆಗಣಿಸಿ, ಜಿಲ್ಲಾ ಕೇಂದ್ರದಲ್ಲಿ ‘ಭೀಮ ಗಾಯನ’: ವಾರ್ತಾ ಇಲಾಖೆ ವಿರುದ್ಧ ಆಕ್ರೋಶ
ಕಾರ್ಯಕ್ರಮದಲ್ಲಿ ಉಪ ನಿರ್ದೇಶಕ ಚನ್ನಬಸಪ್ಪ ಮುದೋಳ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಮಾಹಿತಿ ನೀಡಿದರು. ‘ಕನ್ನಡ ಪ್ರಭ’ ದಿನಪತ್ರಿಕೆಯ ಜಿಲ್ಲಾ ವರದಿಗಾರ ಆನಂದ ಎಂ. ಸೌಧಿ ಕಾರ್ಯಕ್ರಮವನ್ನು ಆಯೋಜಿಸಿ ನಿರೂಪಿಸಿದರು.





