ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಿಕ್ಕೋಡಿಯಿಂದ ಕೇರಳ ಕಡೆಗೆ ಸ್ಪಿರಿಟ್ (ಎಥನಾಲ್) ತುಂಬಿಕೊಂಡು ಸಾಗುತ್ತಿದ್ದ ಟ್ಯಾಂಕರ್ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಾರುತಿ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆಬದಿಯ ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಟ್ಯಾಂಕರ್‌ನಲ್ಲಿ ಸ್ಪಿರಿಟ್ ತುಂಬಿದ್ದರಿಂದ, ಡಿಕ್ಕಿ ಹೊಡೆದ ಕೆಲವೇ ಕ್ಷಣಗಳಲ್ಲಿ ವಾಹನಕ್ಕೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ ಮತ್ತು ಬೆಂಕಿಯ ತೀವ್ರತೆ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತ ಹೋಗಿದೆ. ಭಾರಿ ಜ್ವಾಲೆಗಳು ಆವರಿಸಿದ ಪರಿಣಾಮ ಲಾರಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್, ಲಾರಿಯ ಚಾಲಕ ತಕ್ಷಣವೇ ವಾಹನದಿಂದ ಹೊರಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆ ಸಂದರ್ಭದಲ್ಲಿ ಚಾಲಕನ ಚುರುಕುತನದಿಂದ ಜೀವ ಹಾನಿ ತಪ್ಪಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟು ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಸಮಯೋಚಿತ ಕಾರ್ಯಾಚರಣೆಯಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ನಿಷೇಧವಿದ್ದರೂ ನಿಲ್ಲದ ಮರಳು ದಂಧೆ; ಎನ್‌ಜಿಟಿ ಆದೇಶಕ್ಕೂ ಕಿಮ್ಮತ್ತಿಲ್ಲ
ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಳಿಕ ಸಂಚಾರವನ್ನು ಪುನರಾರಂಭಿಸಲಾಗಿದೆ. ಘಟನೆ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.





