ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮ ನಗರದಲ್ಲಿ ನಿನ್ನೆ ದಿನ ನಡೆದ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ) ಕಾದ್ರೊಳ್ಳಿ ಬಣ ಜಿಲ್ಲಾ ಸಮಿತಿಯ ನಿಯೋಗವು ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿತು.
ಸಮಿತಿಯ ಜಿಲ್ಲಾಧ್ಯಕ್ಷರಾದ ಬಸವರಾಜ್ ಸಂಗಮೇಶ್ವರ್ ಅವರು ಮೃತ ಮಹಿಳೆಯ ತಾಯಿಯನ್ನು ಭೇಟಿ ಮಾಡಿ ಘಟನೆಯ ಬಗ್ಗೆ ಮಾಹಿತಿ ಪಡೆದು ಕುಟುಂಬಕ್ಕೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ದಲಿತರ ಮೇಲೆ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದು ಖಂಡನೀಯ. ಸಮಾಜದ ದುರ್ಬಲ ವರ್ಗದವರಿಗೆ ಮತ್ತು ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಮಹಿಳೆಯ ಭೀಕರ ಕೊಲೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರಣ್ಯದಲ್ಲಿ ಆತ್ಮಹತ್ಯೆ
ಪರಿಹಾರಕ್ಕಾಗಿ ಮನವಿ: ಅಕಾಲಿಕವಾಗಿ ಮೃತಪಟ್ಟ ಮಹಿಳೆಯ ಕುಟುಂಬವು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಸರ್ಕಾರವು ತಕ್ಷಣವೇ ಸ್ಪಂದಿಸಬೇಕು. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಧನ ಒದಗಿಸಬೇಕು ಹಾಗೂ ಅವರ ಮಗನ ಭವಿಷ್ಯದ ದೃಷ್ಟಿಯಿಂದ ಅಗತ್ಯ ನೆರವು ನೀಡಬೇಕು ಎಂದು ಸಂಘಟನೆಯ ವತಿಯಿಂದ ಸಂಬಂಧಪಟ್ಟ ಇಲಾಖೆಗಳಿಗೆ ಮತ್ತು ಸರ್ಕಾರಕ್ಕೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಲಕ್ಷ್ಮಣ ಬನ್ಸೋಡೆ ಅವರು ಹಾಗೂ ಸಂಘಟನೆಯ ಪ್ರಮುಖ ಪದಾಧಿಕಾರಿಗಳು ಹಾಗೂ ಸ್ಥಳೀಯ ದಲಿತ ಮುಖಂಡರು ಉಪಸ್ಥಿತರಿದ್ದರು.





