14 ವರ್ಷದ ಬಾಲಕಿ ಟ್ಯೂಷನ್‌ಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ದುರುಳರು ಬಲವಂತವಾಗಿ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಡಮ್ ಡಮ್ ಪ್ರದೇಶದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಸಂಜು ಸಹಾ, ವಿಕ್ಕಿ ಪಾಸ್ವಾನ್ ಮತ್ತು ರಾಜೇಶ್ ಪಾಸ್ವಾನ್ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಾಲಕಿಗೆ ಆರೋಪಿಗಳಲ್ಲಿ ಓರ್ವನ ಪರಿಚಯವಿದ್ದು ಅವನೊಂದಿಗೆ ಉದ್ಯಾನವನದಲ್ಲಿ ಮಾತನಾಡುತ್ತಿದ್ದಳು. ಈ ವೇಳೆ ಇನ್ನಿಬ್ಬರು ಬಂದಿದ್ದಾರೆ. ಮೂವರೂ ಸೇರಿ ಬಾಲಕಿಯನ್ನು ಬಲವಂತವಾಗಿ ಇ-ರಿಕ್ಷಾದಲ್ಲಿ ಮೋತಿಲಾಲ್ ಕಾಲೋನಿಯ ಮನೆಗೆ ಕರೆದೊಯ್ದಿದ್ದಾರೆ. ಆಕೆ ಮೆಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಬಾಲಕಿ ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಬಂದು ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಪೋಷಕರು ಡಮ್ ಡಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಮೂವರೂ ಆರೋಪಿಗಳನ್ನು ಬಂಧಿಸಿ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸಂಜು ಸಹಾ ಐದು ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದು, ವಿಕ್ಕಿ ಪಾಸ್ವಾನ್ ಮತ್ತು ರಾಜೇಶ್ ಪಾಸ್ವಾನ್ ಒಂದು ದಿನದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಇಂದು ಬೆಳಿಗ್ಗೆ ಡಮ್ ಡಮ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿ, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.





