18 ವರ್ಷದ ಯುವತಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಲಲಿತ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ಮಂಗಳವಾರ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಯುವತಿ ಮನೆಯಿಂದ ಹೊರ ಬರುತ್ತಿದ್ದಂತೆ 22 ವರ್ಷದ ನಿತಿನ್ ಠಾಕೂರ್ ಎಂಬಾತ ಮತ್ತು ಆತನ ಕೆಲವು ಅಪರಿಚಿತ ಸ್ನೇಹಿತರು ಆಕೆಯನ್ನು ಎಳೆದೊಯ್ದು ಕಾರಿನಲ್ಲಿ ಕೂರಿಸಿದ್ದಾರೆ. ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ ಎಂದು ಲಲಿತ್‌ಪುರ ಜಿಲ್ಲೆಯ ಜಖೌರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಸುರೆಂದ್ರ ಸಿಂಗ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಬಿಜೆಪಿ ಶಾಸಕರ ಸೋದರಳಿಯ ಸೇರಿ ಮೂವರ ಬಂಧನ
ಸದ್ಯ ನಿತಿನ್ ಠಾಕೂರ್ ಮತ್ತು ಆತನ ಅಪರಿಚಿತ ಸ್ನೇಹಿತರ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಲಾಗಿದೆ. ಠಾಕೂರ್ ಮತ್ತು ಯುವತಿಗೆ ಮೂರು ತಿಂಗಳುಗಳಿಂದ ಪರಿಚಯವಿತ್ತು ಎಂದು ಹೇಳಲಾಗಿದೆ. ಆತ ಈ ಪರಿಚಯವನ್ನೇ ದುರುಪಯೋಗ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಒಟ್ಟಾರೆಯಾಗಿ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಪರಾಧ ಪ್ರಕರಣಗಳ ಪಟ್ಟಿಯಲ್ಲಿ ಉತ್ತರ ಪ್ರದೇಶ 20ನೇ ಸ್ಥಾನದಲ್ಲಿದೆ. ಆದರೆ ಯುಪಿಯಲ್ಲಿ ದೇಶದಲ್ಲೇ ಅಧಿಕ ಮಹಿಳೆಯರ ವಿರುದ್ಧ ಅಪರಾಧ ಪ್ರಕರಣಗಳು ದಾಖಲಾಗಿವೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.





