ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು, ಹೈಕೋರ್ಟ್‌ನ ನಿರ್ದಿಷ್ಟ ಪೀಠದಿಂದ ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಕೋರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ
ಫೆಬ್ರವರಿ 27ರಂದು ದೆಹಲಿ ರೌಸ್ ಅವೆನ್ಯೂ ಕೋರ್ಟ್, ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಮತ್ತು ಇತರರನ್ನು ಖುಲಾಸೆಗೊಳಿಸಿತ್ತು. ಈ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮೂರ್ತಿ ಶರ್ಮಾ ಅವರ ಪೀಠವು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದೆ.
ಇದನ್ನು ಓದಿದ್ದೀರಾ? ದೆಹಲಿ ಅಬಕಾರಿ ನೀತಿ ಪ್ರಕರಣ | ಎಎಪಿಯನ್ನು ಆರೋಪಿಯನ್ನಾಗಿ ಮಾಡುತ್ತೇವೆಂದ ಇಡಿ
ಆದರೆ ನ್ಯಾಯಮೂರ್ತಿ ಶರ್ಮಾ ಅವರ ಪೀಠವು ನಿಷ್ಪಕ್ಷಪಾತವಾಗಿ ವಿಚಾರಣೆ ನಡೆಸುವುದಿಲ್ಲ ಎಂಬ ಆತಂಕ ವ್ಯಕ್ತಪಡಿಸಿ, ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರು ಪ್ರಕರಣ ವರ್ಗಾವಣೆಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದರು. ಆದರೆ ಈ ಮನವಿಯನ್ನು ತಿರಸ್ಕರಿಸಲಾಗಿದೆ.
ಹೈಕೋರ್ಟ್ ತಮ್ಮ ಮನವಿಯನ್ನು ತಿರಸ್ಕರಿಸಿದ ಕಾರಣ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರು ಪ್ರಕರಣ ವರ್ಗಾವಣೆ ಮತ್ತು ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಏನಿದು ಅಬಕಾರಿ ನೀತಿ ಪ್ರಕರಣ?
ದೆಹಲಿ ಸರ್ಕಾರವು ಮದ್ಯ ಮಾರಾಟವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸಲು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಈ ನೀತಿ ಅಡಿಯಲ್ಲಿ ಸರ್ಕಾರಿ ಮದ್ಯದ ಮಳಿಗೆಗಳನ್ನು ಮುಚ್ಚಿ, ಖಾಸಗಿ ಸಂಸ್ಥೆಗಳಿಗೆ ಪರವಾನಗಿ ನೀಡಲು ಮುಂದಾಗಿತ್ತು. ಆದರೆ ಈ ನೀತಿಯನ್ನು ರೂಪಿಸುವಾಗ ಮತ್ತು ಜಾರಿಗೆ ತರುವಾಗ ಕೆಲವು ಮದ್ಯದ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲು ಅಕ್ರಮ ಎಸಗಲಾಗಿದೆ ಮತ್ತು ಪ್ರತಿಯಾಗಿ ಲಂಚ ಪಡೆಯಲಾಗಿದೆ ಎಂಬುದು ಸಿಬಿಐ, ಇಡಿ ಆರೋಪವಾಗಿದೆ.
ಈ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಸೇರಿದಂತೆ ಹಲವರು ಬಂಧನಕ್ಕೊಳಗಾಗಿದ್ದರು. ಫೆಬ್ರವರಿಯಲ್ಲಿ ಕೋರ್ಟ್ ಈ ಪ್ರಕರಣದಲ್ಲಿ ಕೇಜ್ರಿವಾಲ್ ಮತ್ತು ಇತರ 22 ಮಂದಿಯನ್ನು ಖುಲಾಸೆಗೊಳಿಸಿದೆ. ಆದರೆ ಈ ತೀರ್ಪನ್ನು ಪ್ರಶ್ನಿಸಿ ಸಿಬಿಐ ಈಗ ಹೈಕೋರ್ಟ್ ಮೊರೆ ಹೋಗಿದೆ.





