ವೈದ್ಯೆಯೊಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಸತಾರಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫಲ್ಟನ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂಪದ ಮುಂಡೆ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ವೈದ್ಯ ಎಂದು ಗುರುತಿಸಲಾಗಿದೆ. ವೈದ್ಯಕೀಯ ಪರೀಕ್ಷೆ ವಿಚಾರವಾಗಿ ವೈದ್ಯೆ ಮತ್ತು ಜಿಲ್ಲಾ ಪೊಲೀಸರ ನಡುವೆ ವಾಗ್ವಾದ ನಡೆಯುತ್ತಿತ್ತು. ಇದೇ ಸಂದರ್ಭದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗೆ, ವೈದ್ಯೆ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿತ್ತು. ಇದೇ ಕಾರಣಕ್ಕಾಗಿ, ವೈದ್ಯೆ ವಿರುರ್ದಧ ಇಲಾಖಾ ವಿಚಾರಣೆಯನ್ನೂ ಆರಂಭಿಸಲಾಗಿತ್ತು ಎಂದು ತಿಳಿದುಬಂದಿದೆ.
ಘಟನೆಯಿಂದಾಗಿ ನೊಂದಿದ್ದ ಡಾ. ಸಂಪದ ತಮ್ಮ ಹಿರಿಯ ಅಧಿಕಾರಿ ಬಳಿ ತಮಗೆ ಅನ್ಯಾಯವಾಗುತ್ತಿದೆ ಎಂದು ಹೇಳಿಕೊಂಡಿದ್ದರು. ತಮ್ಮ ಮೇಲಿನ ಆಪಾದನೆಗಳು ಮತ್ತು ಕಿರುಕುಳ ನಿಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಹೇಳಿದ್ದರು ಎಂದು ಮೂಲಗಳು ತಿಳಿಸಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ.
ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಕಳೆದ 30 ವರ್ಷಗಳಲ್ಲಿ ವಿಧಾನಸಭೆಯಲ್ಲಿ ಮುಸ್ಲಿಂ ಪ್ರಾತಿನಿಧ್ಯ ತೀವ್ರ ಕುಸಿತ
ಇದೆಲ್ಲದರ ನಡುವೆ, ಅವರು ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಾಗಿದ್ದು, ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.




