ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು, ತಮ್ಮ ವಿರುದ್ಧದ ಲೋಕಸಭಾ ಸ್ಪೀಕರ್ ನೇಮಕದ ಸಂಸದೀಯ ಸಮಿತಿಯ ತನಿಖೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ನ್ಯಾಯಮೂರ್ತಿಗಳ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ನೀಡಿದೆ.
ನ್ಯಾಯಮೂರ್ತಿಗಳ ಪದಚ್ಯುತಿಗೆ ಕೋರಿದ್ದ ನಿರ್ಣಯವನ್ನು ರಾಜ್ಯಸಭಾ ಉಪಸಭಾಪತಿಯವರು ತಿರಸ್ಕರಿಸಿದ್ದರೂ, ಲೋಕಸಭಾ ಸ್ಪೀಕರ್ ತನಿಖಾ ಸಮಿತಿಯನ್ನು ರಚಿಸಿರುವುದು ಸಿಂಧುವಲ್ಲ ಎಂದು ನ್ಯಾ. ವರ್ಮಾ ಪ್ರಶ್ನಿಸಿದ್ದರು. ಆದರೆ, ಈ ವಾದವನ್ನು ಸುಪ್ರೀಂ ಕೋರ್ಟ್ ಮನ್ನಿಸಿಲ್ಲ.
ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಎಸ್.ಸಿ. ಶರ್ಮಾ ಅವರಿದ್ದ ಪೀಠವು, ಈ ಅರ್ಜಿಯ ಮೇಲಿನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿರುವ ಪೀಠವು, ಸಂಸದೀಯ ಸಮಿತಿಯು ತನ್ನ ತನಿಖೆಯನ್ನು ಮುಂದುವರಿಸಬಹುದು ಎಂದು ತಿಳಿಸಿದೆ.
ಇದನ್ನು ಒದಿದ್ದೀರಾ? ಈ ದಿನ ಸಂಪಾದಕೀಯ | ಬರಪೀಡಿತ ಜಿಲ್ಲೆಯ ಜನರ ಜಲಾಗ್ರಹದ ಕೂಗು ಕೇಳಿಸುವುದೇ ಸರ್ಕಾರಕ್ಕೆ?
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಅಗ್ನಿ ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧದ ವಾಗ್ದಂಡನೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿತ್ತು. ಈ ಆರೋಪಗಳ ತನಿಖೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು 2025ರ ಆಗಸ್ಟ್‌ನಲ್ಲಿ ತ್ರಿಸದಸ್ಯ ಸಮಿತಿಯನ್ನು ನೇಮಕ ಮಾಡಿದ್ದರು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಣಿಂದರ್ ಮೋಹನ್ ಮತ್ತು ಹಿರಿಯ ವಕೀಲ ಬಿ.ವಿ. ಆಚಾರ್ಯ ಅವರು ಈ ತನಿಖಾ ಸಮಿತಿಯ ಸದಸ್ಯರಾಗಿದ್ದಾರೆ.
ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿದ್ದ ನ್ಯಾ. ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಬೆಂಕಿ ನಂದಿಸುವ ಸಂದರ್ಭದಲ್ಲಿ ಮನೆಯೊಳಗೆ ಸುಮಾರು 1.5 ಅಡಿ ಎತ್ತರದಷ್ಟು ನಗದು ಕಂತೆಗಳು ಪತ್ತೆಯಾಗಿದ್ದವು ಎಂದು ವರದಿಯಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಅಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ನ್ಯಾ. ವರ್ಮಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ್ದರು.





