ತಮಿಳುನಾಡಿನ ಕರೂರಿನಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 39 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಟಿವಿಕೆ ಪಕ್ಷದ ನಾಯಕ, ನಟ ವಿಜಯ್, “ಘಟನೆಯಿಂದ ನನ್ನ ಹೃದಯ ಚೂರಾಗಿದೆ. ದುಃಖದಿಂದ ನರಳುತ್ತಿದ್ದೇನೆ” ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಘಟನೆ ಬಗ್ಗೆ ‘ಎಕ್ಸ್‘ನಲ್ಲಿ ಟ್ವೀಟ್ ಮಾಡಿರುವ ವಿಜಯ್, “ಘಟನೆಯು ನಿಜಕ್ಕೂ ನಮಗೆ ತುಂಬಲಾಗದ ನಷ್ಟ ಉಂಟುಮಾಡಿದೆ. ಸಾಂತ್ವನದ ಮಾತುಗಳು ಪ್ರೀತಿಪಾತ್ರರ ನಷ್ಟವನ್ನು ಭರಿಸಲಾರದು. ಇಂತಹ ಸಂದರ್ಭಗಳಲ್ಲಿ ನಾನು ನಿಮ್ಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಕ್ಕೆ ನಿಮ್ಮ ಕುಟುಂಬದ ಸದಸ್ಯನಾಗಿ 20 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ನೀಡಲು ನಾನು ಉದ್ದೇಶಿಸಿದ್ದೇನೆ” ಎಂದು ಹೇಳಿದ್ದಾರೆ.
2026ರಲ್ಲಿ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೊಸದಾಗಿ ಟಿವಿಕೆ ಪಕ್ಷ ಕಟ್ಟಿರುವ ನಟ ವಿಜಯ್, ರಾಜ್ಯದಾದ್ಯಂತ ಬೃಹತ್ ಸಮಾವೇಶಗಳನ್ನು ನಡೆಸುತ್ತಿದ್ದಾರೆ. ಶನಿವಾರ ಕರೂರಿನಲ್ಲಿ ವಿಜಯ್ ಬೃಹತ್ ಸಮಾವೇಶ ಆಯೋಜಿಸಿದ್ದರು. ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಈ ವೇಳೆ, ಕಾಲ್ತುಳಿತ ದುರಂತ ಸಂಭವಿಸಿದೆ. ಹಲವಾರು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಗ್ಗೆ ತಿಳಿದ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಶನಿವಾರ ರಾತ್ರಿಯೇ ಕರೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಮೃತರ ಕುಟುಂಬಸ್ಥರಿಗೂ ಸಾಂತ್ವನ ಹೇಳಿದ್ದಾರೆ.
ಮೃತರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರವನ್ನು ಸಿಎಂ ಘೋಷಣೆ ಮಾಡಿದ್ದಾರೆ. ಅಲ್ಲದೆ, ಘಟನೆಯ ತನಿಖೆಗಾಗಿ ತನಿಖಾ ಆಯೋಗವನ್ನು ರಚಿಸಿದ್ದಾರೆ.




