ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು ನಾಮಪತ್ರದೊಂದಿಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಮಂಜೇಶ್ವರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕ ಕೆ. ಸುರೇಂದ್ರನ್ ಕೂಡಾ ಅಫಿಡವಿಟ್ ಸಲ್ಲಿಸಿದ್ದು, ಅವರ ವಿರುದ್ಧ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂದು ತಿಳಿದುಬಂದಿದೆ.
ಸುರೇಂದ್ರನ್ ವಿರುದ್ಧದ 242 ಪ್ರಕರಣಗಳಲ್ಲಿ ಹೆಚ್ಚಿನವು ವಿವಿಧ ಪ್ರತಿಭಟನೆಗಳಲ್ಲಿ ಭಾಗಿಯಾದಾಗ ದಾಖಲಾದ ಪ್ರಕರಣಗಳಾಗಿದೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ. 28 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಹೊಂದಿದ್ದಾರೆ. ಒಂಬತ್ತು ಲಕ್ಷ ರೂ.ಗಿಂತ ಹೆಚ್ಚಿನ ಸಾಲವನ್ನು ಹೊಂದಿದ್ದಾರೆ ಎಂದು ಘೋಷಿಸಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಕ್ರೈಸ್ತ ಸಮುದಾಯದ ಮತಗಳು ‘ಗೇಮ್ ಚೇಂಜರ್’ ಆಗಬಹುದೇ?
ಕಾಂಜಿರಪಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೇಂದ್ರ ರಾಜ್ಯ ಸಚಿವ ಜಾರ್ಜ್ ಕುರಿಯನ್ ವಿರುದ್ದ ಕೇವಲ ಒಂದು ಕ್ರಿಮಿನಲ್ ಪ್ರಕರಣವಿದೆ. 2014ರಲ್ಲಿ ತಿರುವನಂತಪುರದಲ್ಲಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂದರ್ಭದಲ್ಲಿ ದಾಖಲಾದ ಪ್ರಕರಣವಿದು ಎನ್ನಲಾಗಿದೆ. ಕುರಿಯನ್ ತಮ್ಮ ಅಫಿಡವಿಟ್‌ನಲ್ಲಿ 1.74 ಕೋಟಿ ರೂ.ಗಳಿಗೂ ಹೆಚ್ಚು ಚರ ಮತ್ತು ಸ್ಥಿರ ಆಸ್ತಿಗಳನ್ನು ಹೊಂದಿರುವುದಾಗಿ, ಎರಡು ಲಕ್ಷ ರೂ.ಗಳಷ್ಟು ಸಾಲ ಇರುವುದಾಗಿ ಘೋಷಿಸಿದ್ದಾರೆ.
ಕಜಕೂಟಂ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್ ವಿರುದ್ಧ ಎಂಟು ಕ್ರಿಮಿನಲ್ ಪ್ರಕರಣಗಳಿವೆ. 20 ಲಕ್ಷ ರೂ.ಗಳಿಗೂ ಹೆಚ್ಚು ಮೌಲ್ಯದ ಚರಾಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ತಮ್ಮ ಬಳಿ ಯಾವುದೇ ಸ್ಥಿರ ಆಸ್ತಿ ಇಲ್ಲ ಎಂದು ಅಫಿಡವಿಟ್ ಮೂಲಕ ಹೇಳಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಕೇರಳ ಚುನಾವಣೆಗೂ ಮುನ್ನ ಪಕ್ಷಗಳ ಸಂಕಟ: ಬಂಡಾಯ- ಪಕ್ಷಾಂತರ- ಉಚ್ಚಾಟನೆ ಸಂಕಷ್ಟ
ಪಾಲಕ್ಕಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕಿ ಶೋಭಾ ಸುರೇಂದ್ರನ್ ವಿರುದ್ಧ 35 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ. ಅವುಗಳಲ್ಲಿ ಹೆಚ್ಚಿನವು ವಿವಿಧ ಪ್ರತಿಭಟನೆಗಳಲ್ಲಿ ಹಾಜರಾಗಿದ್ದಾಗ ದಾಖಲಾಗಿರುವಂತದ್ದು ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಶೋಭಾ ತಮ್ಮ ಅಫಿಡವಿಟ್‌ನಲ್ಲಿ 1.94 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಚರಾಸ್ತಿ ಮತ್ತು ಸ್ಥಿರ ಆಸ್ತಿಯನ್ನು ಘೋಷಿಸಿದ್ದಾರೆ.
ವಟ್ಟಿಯೂರ್ಕಾವು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಕೌನ್ಸಿಲರ್ ಮತ್ತು ಮಾಜಿ ಡಿಜಿಪಿ ಆರ್. ಶ್ರೀಲೇಖಾ ಅವರು ತಮ್ಮ ಅಫಿಡವಿಟ್‌ನಲ್ಲಿ ಐದು ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಚರಾಸ್ತಿ ಮತ್ತು ಸ್ಥಿರ ಆಸ್ತಿಯನ್ನು ಘೋಷಿಸಿದ್ದಾರೆ. ಶ್ರೀಲೇಖಾ ವಿರುದ್ಧ ಪೋಕ್ಸೊ ಪ್ರಕರಣದ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸಿದ್ದಕ್ಕೆ ಒಂದು ಕ್ರಿಮಿನಲ್ ಪ್ರಕರಣ ದಾಖಲಾಗಿದೆ.





