ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿದ್ದು, ಮನೆ ಕುಸಿದು ಬಿದ್ದಿದೆ. ಪರಿಣಾಮ, ಮನೆಯಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಅಯೋಧ್ಯೆಯ ಪೂರಾ ಕಲಂದರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಾಲ್ಗಾಭಾರಿ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ, ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನೂ, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು ಶಂಕಿಸಲಾಗಿದೆ.
“ಸ್ಪೋಟದಿಂದ ಮನೆ ಕುಸಿದಿದೆ. ಆದರೆ, ಸ್ಪೋಟಕ್ಕೆ ಕಾರಣವೇನು ಎಂಬುದು ಗೊತ್ತಾಗಿಲ್ಲ. ತನಿಖೆ ಕೈಗೊಳ್ಳಲಾಗಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಪೂರಾ ಕಲಂದರ್‌ನ ವೃತ್ತಾಧಿಕಾರಿ ಶೈಲೇಂದ್ರ ಸಿಂಗ್ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗದಂತೆ ನೋಡಿಕೊಳ್ಳಲು ಘಟನಾ ಸ್ಥಳಕ್ಕೆ ಸ್ಥಳೀಯರು ಬಾರದಂತೆ ಪೊಲೀಸರು ಮನವಿ ಮಾಡಿದ್ದಾರೆ.




