ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಈ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಂಗಳವಾರ ಬೆಳಗಿನ ಜಾವ ಒಂದು ಗಂಟೆ ಸುಮಾರಿಗೆ ಆರೋಪಿ ಸಂತ್ರಸ್ತೆಯ ಮನೆಯ ಹಿಂಬಾಗಿಲಿನಿಂದ ಪ್ರವೇಶಿಸಿ ತನ್ನ ಸಹೋದರನ ಪಕ್ಕದಲ್ಲಿ ಮಲಗಿದ್ದ ಬಾಲಕಿಯ ಮೇಲೆ ಎರಡು ಬಾರಿ ಗುಂಡು ಹಾರಿಸಿದ್ದಾನೆ. ತಲೆಗೆ ಮತ್ತು ಕುತ್ತಿಗೆಗೆ ಗುಂಡು ಹಾರಿಸಿದ್ದಾನೆ. ಆರೋಪಿ ಸಹೋದರನ ಮೇಲೂ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾನೆ. ಹೊರಗೆ ಮಲಗಿದ್ದ ತಾಯಿ ಆರೋಪಿಯನ್ನು ತಡೆದಾಗ ಆತ ತಾಯಿಗೂ ಗುಂಡು ಹಾರಿಸಿ ತಪ್ಪಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಅತ್ಯಾಚಾರ ಸಂತ್ರಸ್ತೆಯ ಮಾಹಿತಿ ಬಹಿರಂಗ; ಬಿಜೆಪಿ ಮಾಜಿ ಸಂಸದೆಗೆ ಸಮನ್ಸ್
ಈ ಬಗ್ಗೆ ಬಸ್ತಿ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ಎಎಸ್‌ಪಿ) ಶ್ಯಾಮಕಾಂತ್ ಪ್ರತಿಕ್ರಿಯೆ ನೀಡಿದ್ದು, “ಕುಟುಂಬವು ಆರೋಪಿಯನ್ನು ಗುರುತಿಸಿದೆ. ಆತನನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ” ಎಂದು ಹೇಳಿದ್ದಾರೆ.
“ಸಂತ್ರಸ್ತ ಮಹಿಳೆಯ ಗ್ರಾಮದ ನಿವಾಸಿಯಾದ ಆ ವ್ಯಕ್ತಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಲಕಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿದ್ದ. ಆ ಕೃತ್ಯದ ಫೋಟೋಗಳನ್ನು ತೆಗೆದು, ವಿಡಿಯೋ ಮಾಡಿ, ಅದನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ. ಡಿಸೆಂಬರ್ 16ರಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ” ಎಂದು ಶ್ಯಾಮಕಾಂತ್ ತಿಳಿಸಿದ್ದಾರೆ.
“ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದಾಗ ಸಂತ್ರಸ್ತೆಯ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಪೊಲೀಸರು ಡಿಸೆಂಬರ್ 17ರಂದು ಕಲ್ವಾರಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಐಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ. ಅಂದಿನಿಂದ ಆರೋಪಿ ಪರಾರಿಯಾಗಿದ್ದ” ಎಂದು ಹೇಳಿದರು.
ಬಾಲಕಿಯ ತಂದೆ ಪಂಜಾಬ್‌ನಲ್ಲಿ ಕೆಲಸ ಮಾಡುತ್ತಿದ್ದು, ಆಕೆ ತನ್ನ ತಾಯಿ ಮತ್ತು ಸಹೋದರನೊಂದಿಗೆ ಉತ್ತರ ಪ್ರದೇಶದಲ್ಲಿ ವಾಸಿಸುತ್ತಿದ್ದಳು. ಯುಪಿ ಬೋರ್ಡ್ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.





