ವಿದ್ಯಾರ್ಥಿ ನಿಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ಅಸಹಜ ಲೈಂಗಿಕತೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಪ್ರಕರಣ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ 10ನೇ ತರಗತಿಯ 8 ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ಮಾಡಿದ್ದಾರೆ. ಅಸಹನ ಲೈಂಗಿಕತೆಯಲ್ಲಿ ತೊಡಗುವಂತೆ ಒತ್ತಾಯಿಸಿದ್ದಾರೆ. ಸುಮಾರು 6-7 ತಿಂಗಳುಗಳಿಂದ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಪ್ರಕರಣದ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧೀಕ್ಷಕ ಬಾಳಾಸಾಹೇಬ್ ಪಾಟೀಲ್, “ಸಂತ್ರಸ್ತ ವಿದ್ಯಾರ್ಥಿಗಳು ತಮ್ಮ ಮೇಲಿನ ಕಿರುಕುಳದ ಕುರಿತು ವಾರ್ಡನ್ ಬಳಿ ಹೇಳಿಕೊಂಡ ಬಳಿಕ, ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ವಿದ್ಯಾರ್ಥಿಗಳ ವಿರುದ್ಧ ಮಂಗಳವಾರ ಎಫ್‌ಐಆರ್ ದಾಖಲಿಸಲಾಗಿದೆ. ಸಂತ್ರಸ್ತ ವಿದ್ಯಾರ್ಥಿಗಳ ಹೇಳಿಕೆ ಪಡೆಯಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.
ಆರೋಪಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಶಕ್ಕೆ ಪಡೆಯಲಾದ ವಿದ್ಯಾರ್ಥಿಗಳನ್ನು ಬಾಲನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುತ್ತದೆ. ಬಳಿಕ, ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.




