ದೆಹಲಿ ಗಲಭೆ ಪ್ರಕರಣದಲ್ಲಿ ಬಂಧನದಲ್ಲಿರುವ ವಿದ್ಯಾರ್ಥಿ ನಾಯಕರಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡದ ದೆಹಲಿ ಪೊಲೀಸರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಹಾಗೆಯೇ ಈ ಸಂದರ್ಭದಲ್ಲೇ ಜಾಮೀನು ಅರ್ಜಿ ವಿಚಾರಣೆಯನ್ನು ಉನ್ನತ ನ್ಯಾಯಾಲಯ ಅಕ್ಟೋಬರ್ 31ಕ್ಕೆ ಮುಂದೂಡಿಕೆ ಮಾಡಿದೆ.
ಯುಎಪಿಎ ಪ್ರಕರಣದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ ಮತ್ತು ಮೀರನ್ ಹೈದರ್ ಅವರ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ. ಆದರೆ ಈವರೆಗೂ ದೆಹಲಿ ಪೊಲೀಸರು ಪ್ರತಿಕ್ರಿಯಿಸಿಲ್ಲ.
ಇದನ್ನು ಓದಿದ್ದೀರಾ? ಸೋಮವಾರ ಸುಪ್ರೀಂ ಕೋರ್ಟ್‌ನಿಂದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ
ಇದೀಗ ಮತ್ತೆ ಎರಡು ವಾರಗಳ ಕಾಲಾವಕಾಶವನ್ನು ಕೋರಿದ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ಎನ್‌ವಿ ಅಂಜಾರಿಯಾ ಅವರ ದ್ವಿಸದಸ್ಯ ಪೀಠವು, “ಅರ್ಜಿಗೆ ಪ್ರತಿಕ್ರಿಯಿಸಲು ದೆಹಲಿ ಪೊಲೀಸರಿಗೆ ಸಾಕಷ್ಟು ಸಮಯವನ್ನು ನೀಡಲಾಗಿದೆ. ಅಕ್ಟೋಬರ್ 27ರಂದು ವಿಚಾರಣೆ ನಡೆಸಲಾಗುವುದು ಎಂದು ಈ ಹಿಂದೆಯೇ ಸ್ಪಷ್ಟಪಡಿಸಲಾಗಿತ್ತು” ಎಂದು ಹೇಳಿದೆ.
ಇನ್ನಷ್ಟು ಸಮಯಾವಕಾಶ ಕೋರಿದ ಹೆಚ್ಚುವರಿ ಸಾಲಿಟರ್ ಜನರಲ್ ಎಸ್‌ವಿ ರಾಜು ಅವರಿಗೆ, “ಇಲ್ಲ, ಸಾಧ್ಯವೇ ಇಲ್ಲ. ಮುಂದಿನ ವಿಚಾರಣೆಯಲ್ಲಿ ನಿಮ್ಮ ವಾದ ಮಂಡಿಸಿ” ಎಂದು ಹೇಳಿದ್ದಾರೆ.
2022ರ ಆರಂಭದಲ್ಲಿ ಬಂಧಿತರಾಗಿರುವ ಈ ನಾಯಕರುಗಳು ಹಲವು ಬಾರಿ ದೆಹಲಿ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದರೆ ಪ್ರತಿ ಬಾರಿಯೂ ಅರ್ಜಿ ತಿರಸ್ಕೃತಗೊಂಡಿದೆ. ಸೆಪ್ಟೆಂಬರ್ 2ರಂದು ದೆಹಲಿ ಹೈಕೋರ್ಟ್ ಅರ್ಜಿ ತಿರಸ್ಕರಿಸುವುದನ್ನು ಪ್ರಶ್ನಿಸಿ ವಿದ್ಯಾರ್ಥಿ ನಾಯಕರುಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು 53 ಜನರು ಸಾವನ್ನಪ್ಪಿದ್ದಾರೆ. 700ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಆ ಗಲಭೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪದಲ್ಲಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಖಾಲಿದ್ ಸೈಫಿ, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್ ಸೇರಿದಂತೆ 18 ಮಂದಿಯನ್ನು 2020ರ ಸೆಪ್ಟೆಂಬರ್‌ನಲ್ಲಿ ದೆಹಲಿ ಪೊಲೀಸರು ಬಂಧಿಸಿದರು. ಧಾರ್ಮಿಕ ಭಾವನೆ ಕದಡಿದ್ದಾರೆ ಎಂಬ ಆರೋಪ ಹೊರಿಸಿ, ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ’ (ಯುಎಪಿಎ) ಅಡಿ ಪ್ರಕರಣವನ್ನೂ ದಾಖಲಿಸಿದರು. ಆದರೆ ಈವರೆಗೂ ಬಿಡುಗಡೆ ಮಾಡಲಾಗಿಲ್ಲ. ಜತೆಗೆ ಸಂಪೂರ್ಣ ಚಾರ್ಜ್‌ಶೀಟ್ ಕೂಡಾ ಸಲ್ಲಿಸಿಲ್ಲ.





