ಇತ್ತೀಚೆಗೆ ಬಿಡುಗಡೆಯಾಗಿರುವ ಟಾಕ್ಸಿಕ್ ಚಲನಚಿತ್ರದ ಟೀಸರ್ ವಿರುದ್ಧ ಆಮ್ ಆದ್ಮಿ ಪಕ್ಷದ(ಎಎಪಿ) ಮಹಿಳಾ ಘಟಕ ಇಂದು (ಜ.12) ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದೆ. ಕಚೇರಿಗೆ ಭೇಟಿ ನೀಡಿ ದೂರು ನೀಡಿದ ಎಎಪಿ ಮಹಿಳಾ ಘಟಕ ಕೂಡಲೇ ಟೀಸರ್ ರದ್ದುಗೊಳಿಸಬೇಕೆಂದು ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್ “ಈ ಟೀಸರ್‌ನಲ್ಲಿರುವ ಅಶ್ಲೀಲ ಹಾಗೂ ಪ್ರೌಢ ದೃಶ್ಯಗಳು ಹೆಂಗಳೆಯರ ಹಾಗೂ ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ” ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಕ್ಕಾಗಿ ನೂರಾರು ಮರಕ್ಕೆ ಕೊಡಲಿ: ಕ್ರಮಕ್ಕೆ ಸೂಚಿಸಿದ ಸಚಿವ ಈಶ್ವರ್ ಖಂಡ್ರೆ
“ಯಾವುದೇ ವಯಸ್ಸಿನ ಮಿತಿ ಅಥವಾ ಮುನ್ನೆಚ್ಚರಿಕೆ ಇಲ್ಲದೆ ಸಾರ್ವಜನಿಕವಾಗಿ ಬಿಡುಗಡೆಯಾಗಿರುವ ಈ ದೃಶ್ಯಗಳು ಮಹಿಳೆಯರ ಘನತೆಗೆ ಕುಂದು ತರುವಂತಿದ್ದು ಕನ್ನಡದ ಐತಿಹಾಸಿಕ ಸಾಂಸ್ಕೃತಿಕ ಜಗತ್ತಿಗೆ ಮಾಡುತ್ತಿರುವ ತೀವ್ರ ಅಪಮಾನವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಸಮಾಜದ ಮೇಲೆ ವಿಶೇಷವಾಗಿ ಅಪ್ರಾಪ್ತ ವಯಸ್ಕರ ಮೇಲೆ ಇದು ಗಂಭೀರ ದುಷ್ಪರಿಣಾಮಗಳನ್ನು ಬೀರುತ್ತಿದೆ. ರಾಜ್ಯ ಮಹಿಳಾ ಆಯೋಗವು ಈ ಕೂಡಲೇ ಮಧ್ಯಪ್ರವೇಶಿಸಬೇಕು ಹಾಗೂ ಈ ಟೀಸರ್ ಅನ್ನು ಕೂಡಲೇ ರದ್ದುಗೊಳಿಸಲು ಮತ್ತು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಲು ರಾಜ್ಯ ಸರ್ಕಾರಕ್ಕೆ ಹಾಗೂ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು” ಎಂದು ಆಗ್ರಹಿಸಿದ್ದಾರೆ.
“ನಮ್ಮ ನಾಡಿನ ಮಹಿಳೆಯರ ಸಾಂಸ್ಕೃತಿಕ ಮತ್ತು ನೈತಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಸಾಂವಿಧಾನಿಕ ಕರ್ತವ್ಯಕ್ಕೆ ಬದ್ಧವಾಗಿರುವ ಮಹಿಳಾ ಆಯೋಗವು ಕೂಡಲೇ ಕ್ರಮಕ್ಕೆ ಮುಂದಾಗಬೇಕು. ಸರ್ಕಾರವು ಸಹ ಈ ಬಗ್ಗೆ ಕಠಿಣವಾದಂತಹ ಕಾನೂನುಗಳನ್ನು ರೂಪಿಸಬೇಕು” ಎಂದು ಉಷಾ ಮೋಹನ್ ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ಮುಖಂಡಯರಾದ ವೀಣಾ ಸರ್ರಾವ್. ಜ್ಯೋತಿ ಮತ್ತು ಇನ್ನಿತರ ಮಹಿಳಾ ಮುಖಂಡರುಗಳು ಇದ್ದರು.





