ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಬಂಧನ ಭೀತಿಯಲ್ಲಿದ್ದ ಬಸವರಾಜ್, ಬಂಧನದಿಂದ ಪಾರಾಗಿದ್ದಾರೆ. ಇತ್ತೀಚೆಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿಜೆಪಿ ಶಾಸಕನ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಬಳಿಕ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದೀಗ, ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
2025 ಜುಲೈ 15ರ ರಾತ್ರಿ ಬೆಂಗಳೂರಿನ ಹಲಸೂರು ಕೆರೆ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಬಿಕ್ಲು ಶಿವ ಕೊಲೆಯಲ್ಲಿ ಬೈರತಿ ಬಸವರಾಜ್ ಕೈವಾಡವಿದೆ ಎಂದು ಆತನ ತಾಯಿ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಬಸವರಾಜ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಬೈರತಿ ಬಸವರಾಜ್ ಅವರನ್ನು ಎ5 ಆರೋಪಿಯಾಗಿ ಪೊಲೀಸರು ಉಲ್ಲೇಖಿಸಿದ್ದಾರೆ.
ಪ್ರಕರಣ ದಾಖಲಾಗುತ್ತಿದ್ದಂತೆ, ಬೈರತಿ ಬಸವರಾಜ್ ಪರಾರಿಯಾಗಿದ್ದರು. ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿತ್ತು.
ಬಳಿಕ, ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ವಾದ ಮಂಡಿಸಿದ ಬೈರತಿ ಪರ ವಕೀಲರು, “ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಬೈರತಿ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ, ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದಾಗ, ಬಸವರಾಜ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಅವರ ವಿರುದ್ಧ ಇನ್ನೂ ಆರೋಪಪಟ್ಟಿ ಸಲ್ಲಿಸಿಲ್ಲ. ಆರೋಪಪಟ್ಟಿ ಸಲ್ಲಿಸದಿರುವುದಕ್ಕೆ ತನಿಖಾಧಿಕಾರಿ ಸಮಂಜಸ ಕಾರಣ ನೀಡಿಲ್ಲ. ಜುಲೈ 18 ರಿಂದ ಡಿಸೆಂಬರ್ 19 ರವರೆಗೆ ಬಂಧನದಿಂದ ರಕ್ಷಣೆಯಿತ್ತು. ಇದೇ ರಕ್ಷಣೆ ಮುಂದುವರಿಸಬೇಕು” ಎಂದು ವಾದಿಸಿದ್ದಾರೆ.
ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ಪೀಠ, ಬೈರತಿ ಬಸವರಾಜ್ಗೆ ಮಧ್ಯಂತರ ಜಾಮೀನು ನೀಡಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜನವರಿ 6ಕ್ಕೆ ಮುಂದೂಡಿದೆ.




