- ಆರ್ಥಿಕ ಸದೃಢತೆ ಒದಗಿಸಲು ಐದು ಗ್ಯಾರಂಟಿ ಯೋಜನೆ : ಪ್ರಿಯಾಂಕ್ ಖರ್ಗೆ
- ಭೀಮಳ್ಳಿ ಗ್ರಾಮ ಪಂಚಾಯತ್‌ನಲ್ಲಿ ‘ಗೃಹಲಕ್ಷ್ಮಿ ಯೋಜನೆ’ಗೆ ಚಾಲನೆ
ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿಗಳನ್ನು ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಆದರೆ ವಿರೋಧಪಕ್ಷ ಬಿಜೆಪಿ ವಿರೋಧ ಮಾಡ್ತನೇ ಇದೆ. ಈ ಬಗ್ಗೆ ಜನರು ಗಮನಹರಿಸದೆ ನಮ್ಮ ಸರ್ಕಾರವನ್ನು ಆಶೀರ್ವದಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿ ನಗರದ ಹೊರವಲಯದ ಭೀಮಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಗರಗಾ ಕಲ್ಯಾಣ ಮಂಟಪದಲ್ಲಿ ನಡೆದ ‘ಗೃಹಲಕ್ಷ್ಮಿ’ ಯೋಜನೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ರಾಜ್ಯದ ಜನರ ಸಮಸ್ಯೆಗಳನ್ನು ಅರಿತ ನಂತರ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತು. ಅಂದು ಮಾಡಿದ ಘೋಷಣೆಯನ್ನು ನಮ್ಮ ಸರ್ಕಾರ ಇಂದು ಜಾರಿಗೆ ತಂದು ನುಡಿದಂತೆ ನಡೆದುಕೊಂಡಿದ್ದೇವೆ ಎಂದು ಹೇಳಿದರು.
ಮಹಿಳಾ ಸಬಲೀಕರಣ ಹಾಗೂ ಆರ್ಥಿಕ ಸದೃಢತೆ ಒದಗಿಸುವ ಹಿನ್ನೆಲೆಯಲ್ಲಿ ಈ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ರೂಪಿಸಿದೆ. ಶಕ್ತಿ ಯೋಜನೆಯಡಿಯಲ್ಲಿ ದಿನನಿತ್ಯ ಸುಮಾರು 60 ಲಕ್ಷ ಮಹಿಳೆಯರು ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಉಚಿತ ವಿದ್ಯುತ್ ಒದಗಿಸುವ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ರಾಜ್ಯದ 70 ಲಕ್ಷ ಮನೆಗಳಿಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಅನ್ನ ಭಾಗ್ಯ ಯೋಜನೆಯಡಿಯಲ್ಲಿ ರಾಜ್ಯದ ಸುಮಾರು 4.47 ಕೋಟಿ ಫಲಾನುಭವಿಗಳು ಐದು ಕೆಜಿ ಅಕ್ಕಿಯನ್ನು ಉಚಿತವಾಗಿ ಅಥವಾ ಅಕ್ಕಿ ಖರೀದಿಗೆ ಹಣ ಪಡೆದುಕೊಳ್ಳುತ್ತಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ ಕುಟುಂಬದ ಪ್ರತಿಯೊಬ್ಬ ಯಜಮಾನಿ ತಿಂಗಳಿಗೆ ರೂ 2000 ಪಡೆಯಲಿದ್ದಾರೆ. ಜಿಲ್ಲೆಯಲ್ಲಿ 4.72 ಲಕ್ಷ ಹಾಗೂ ರಾಜ್ಯದಲ್ಲಿ 1.28 ಕೋಟಿ ನೋಂದಾಯಿತ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು.
ವೇದಿಕೆಯ ಮೇಲೆ ಶಾಸಕ ಅಲ್ಲಮಪ್ರಭು ಪಾಟೀಲ್, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.





