ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯತಿಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್ ಸಭೆಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು ನಡೆಸಬೇಕು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಒಂದು ವರ್ಷದಲ್ಲಿ ಎರಡು ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂಬ ಮಾಹಿತಿ ಮಾರ್ಗಸೂಚಿಗಳಲ್ಲಿದೆ ಎಂದು ಸಚಿವರು ಹೇಳಿದ್ದು, ಪ್ರತಿ ಆರ್ಥಿಕ ವರ್ಷದಲ್ಲಿ ಜನವರಿ ಮಾಹೆಯ 26, ಏಪ್ರಿಲ್ ಮಾಹೆಯ 24, ಆಗಸ್ಟ್ ಮಾಹೆಯ 15 ಮತ್ತು ಅಕ್ಟೋಬರ್ ಮಾಹೆಯ 2ರಂದು ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಸೂಚಿಸಲಾಗಿದೆ, ಒಂದು ವರ್ಷದಲ್ಲಿ ಒಂದು ವಿಶೇಷ ಮಹಿಳಾ ಗ್ರಾಮಸಭೆ ಮತ್ತು ಒಂದು ಮಕ್ಕಳ ಗ್ರಾಮಸಭೆಯನ್ನು ಆಯೋಜಿಸಲು ಮಾರ್ಗದರ್ಶನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?
ಗ್ರಾಮ ಸಭೆಗಳನ್ನು ಆಯೋಜಿಸುವ ಸಂಬಂಧ ತಾಲ್ಲೂಕು ಪಂಚಾಯತಿಗಳ ಕಾರ್ಯಾನಿರ್ವಾಹಕ ಅಧಿಕಾರಿಗಳು ನಿರ್ವಹಿಸಬೇಕಾದ ಜವಾಬ್ದಾರಿಗಳನ್ನೂ ಸಹ ಈ ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ ಎಂದು ತಿಳಿಸಿರುವ ಗ್ರಾಮೀಣಾಭಿವೃದ್ಧಿ ಸಚಿವರು ತಾಲ್ಲೂಕು ಪಂಚಾಯತಿಗಳ ಕಾರ್ಯಾನಿರ್ವಾಹಕ ಅಧಿಕಾರಿಗಳು ತಮ್ಮ ಜವಾಬ್ದಾರಿಯಲ್ಲಿ ಲೋಪವಾಗದಂತೆ ಕಾರ್ಯ ನಿರ್ವಹಿಸಲು ಸೂಚಿಸಿದ್ದಾರೆ.





