ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಂಗಳೂರಿನ ಕೆಂಗೇರಿಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಗುರುರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ, ಖಾಸಗಿ ಸುದ್ದಿವಾಹಿನಿಯೊಂದಿಗೆ ಮತನಾಡಿದ್ದ ಗುರುರಾಜ್, ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ವೇಳೆ, ಅವಾಚ್ಯ ಶಬ್ದಗಳನ್ನು ಬಳಸಿ ಸಿದ್ದರಾಮಯ್ಯ ಅವರಿಗೆ ಅವಮಾನಿಸಿದ್ದರು. ಅವರ ನಿಂದಿನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ವಿಡಿಯೋವನ್ನು ವೈರಲ್ ಆದ ಬಳಿಕ, ಬೆಂಗಳೂರಿನ ಕಾಂಗ್ರೆಸ್ ಮುಖಂಡ ಕುಶಾಲ್ ಅರೆವೇಗೌಡ ಎಂಬವರು ಅರ್ಚಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ದಾಖಲಿಸಿಕೊಂಡಿದ್ದ ಪೊಲೀಸರು, ಶನಿವಾರ ಸಂಜೆ ಅರ್ಚಕ ಗುರುರಾಜ್ ಅವರನ್ನು ಬಂಧಿಸಿದ್ದಾರೆ.
ಅವರ ಬಂಧನದ ಬೆನ್ನಲ್ಲೇ, ರಾಘವೇಂದ್ರ ಮಠದ ಕಾರ್ಯದರ್ಶಿ ಜೆ.ಎಸ್ ಭಾರದ್ವಾಜ್ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, “ಅರ್ಚಕ ಗುರುರಾಜ್ ಹೇಳಿಕೆಗೂ ರಾಘವೇಂದ್ರ ಸ್ವಾಮಿ ಮಠಕ್ಕೂ ಯಾವುದೇ ಸಂಬಂಧವಿಲ್ಲ. ಅವರ ಹೇಳಿಕೆಯನ್ನು ಮಠದ ಆಡಳಿತ ಮಂಡಳಿ ತೀವ್ರವಾಗಿ ಖಂಡಿಸುತ್ತದೆ. ಅಲ್ಲದೆ, ಆತನನ್ನು ಅರ್ಚಕ ಸ್ಥಾನದಿಂದ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.




