ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸಿ. ಹೊಸ ಆವಿಷ್ಕಾರ ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ. ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಿ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಕಾಸಸೌಧ ಕಚೇರಿಯಲ್ಲಿ ಸೋಮವಾರ ಕೃಷಿ ಹಾಗೂ ಜಲಾನಯನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೃಷಿ ಸಚಿವರು, ಮುಂಗಾರು, ಹಾಗೂ ಹಿಂಗಾರಿನಲ್ಲಿ ಬಿತ್ತನೆಯಲ್ಲಿ ಶೇ 100 ಪ್ರಗತಿ ಸಾಧಿಸಿದ್ದು, ಕೃಷಿ ಭಾಗ್ಯ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು.
ಇದನ್ನು ಓದಿದ್ದೀರಾ? 4 ದಿನಗಳ ಕೃಷಿ ಮೇಳಕ್ಕೆ ಚಾಲನೆ | ಕೃಷಿ ಸಬಲೀಕರಣಕ್ಕೆ ನೆರವಾಗಿ: ಸಚಿವ ಚಲುವರಾಯಸ್ವಾಮಿ
ಶೇಕಡ 80ರಷ್ಟು ಕಾಮಗಾರಿ ಕಟ್ಟಡಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಸಚಿವರು, ಈಗಾಗಲೇ ಖರ್ಚಾಗಿರುವ ಅನುದಾನಕ್ಕೆ ಬಳಕೆ ಪ್ರಮಾಣ ಪತ್ರ ನೀಡಿ ಉಳಿಕೆ ಅನುದಾನ ಬಿಡುಗಡೆ ಮಾಡಿಸಿಕೊಳ್ಳುವಂತೆ ನಿರ್ದೇಶನ ನೀಡಿದರು. ಹಾಗೆಯೇ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ, ಜವಾಬ್ದಾರಿಯುತವಾಗಿ ಕೆಲಸಮಾಡಿ ಎಂದು ಕೃಷಿ ಸಚಿವರು ಸೂಚಿಸಿದರು.
ರೈತ ಸಂಪರ್ಕ ಕೇಂದ್ರ ಹಾಗೂ ಗೋದಾಮು ಹಾಗೂ ವಿಶ್ವವಿದ್ಯಾನಿಲಯಗಳ ಹಲವು ಕಟ್ಟಡ ಕಾಮಗಾರಿಗಳನ್ನು RIDF ಅನುದಾನದಲ್ಲಿ ಕೈಗೊಳ್ಳಲಾಗುತ್ತಿದ್ದು ಪ್ರತಿ ಕಟ್ಟಡವಾರು ಪ್ರಗತಿ ಬಗ್ಗೆ ಸಚಿವರು ವಿಸ್ತೃತವಾಗಿ ಪರಿಶೀಲನೆ ನಡೆಸಿದರು.

ಬೆಳೆ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ, ನೊಂದಣಿ ಜಾಸ್ತಿ ಮಾಡಿ, ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗೆ ನೆರವಾಗುವತ್ತಲೂ ಗಮನ ಹರಿಸಿ. ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಿ ಎಂದು ಸಚಿವ ಎನ್ ಚಲುವರಾಯಸ್ವಾಮಿ ಸಲಹೆ ನೀಡಿದರು. ಹೈಟೆಕ್ ಹಾರ್ವೆಸ್ಟ್ ಹಬ್ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಿ ಎಂದು ಹೇಳಿದರು.
ಇದನ್ನು ಓದಿದ್ದೀರಾ? ಕೃಷಿ ವಿವಿಗಳಲ್ಲಿ ಖಾಲಿಯಿರುವ ಹುದ್ದೆ ಭರ್ತಿಗೆ ಕ್ರಮ: ಸಚಿವ ಚಲುವರಾಯಸ್ವಾಮಿ
ಯಾಂತ್ರೀಕರಣ ಯೋಜನೆ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು, ಹೊಸ ತಳಿಗಳ ಪ್ರಯೋಜನದ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಹಾಗೂ ಹಾರ್ವೇಸ್ಟರ್ ಹಬ್‌ಗಳನ್ನು ಎಲ್ಲಾ ಜಿಲ್ಲೆಗಳಲ್ಲೂ ಅನುಷ್ಠಾನಗೊಳಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು. ಮಣ್ಣಿನ ಪರೀಕ್ಷೆ ಅತ್ಯಂತ ಮುಖ್ಯವಾದದ್ದು, ಇದನ್ನು ಹೆಚ್ಚಾಗಿ ಅನುಷ್ಠಾನ ಮಾಡಿ ರಾಸಾಯನಿಕಗಳ ಹಾಗೂ ಅದರ ಅನಾನೂಕೂಲಗಳ ಬಗ್ಗೆ ಜಾಗೃತಿ ಮೂಡಿಸಿ ಎಂದು ಅವರು ಸೂಚಿಸಿದರು.
ಬೆಳೆ ವಿಮೆ ನೊಂದಣಿ ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ ಬೆಳೆ ವಿಮೆ ಹಣ ಪಾವತಿಯಲ್ಲಿನ ಕೆಲವು ತಾಂತ್ರಿಕ ದೋಷಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಎಲ್ಲಾ ಅಧಿಕಾರಿಗಳು ರೈತರ ಬಳಿ ಹೋಗಿ ಸಮಸ್ಯೆ ಆಲಿಸಬೇಕು, ಕೃಷಿಕರ ಜಮೀನುಗಳಿಗೆ ಭೇಟಿ ನೀಡದ ,ಅವರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೃಷಿ ಸಚಿವರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆ ಆಯುಕ್ತರಾದ ವೈ ಎಸ್ ಪಾಟೀಲ್, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಯು ಪಿ ಸಿಂಗ್, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ ಟಿ ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಂಥನಾಳ್, ಸೆಕಂಡರಿ ಅಗ್ರಿಕಲ್ಚರ್ ನಿರ್ದೇಶಕ ವೆಂಕಟರಮಣ ರೆಡ್ಡಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.





