ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡುವುದರ ವಿರುದ್ಧವಾಗಿ ಜುಲೈ 25ಕ್ಕೆ ಬೆಂಗಳೂರು ಬಂದ್ ಘೋಷಿಸಲಾಗಿತ್ತು. ಹಾಗೆಯೇ ಮೂರು ದಿನಗಳ ಕಾಲ ಅಲ್ಲಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆಗಳು ಹೇಳಿದ್ದವು. ಆದರೆ ಸಂಘಟನೆಗಳು ಬಂದ್, ಪ್ರತಿಭಟನೆ ಕೈಬಿಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೋಟಿಸ್ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಸಭೆ ಬಳಿಕ ಮಾಧ್ಯಮಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, “ವ್ಯಾಪಾರ ವಹಿವಾಟು ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ” ಎಂದಿದ್ದಾರೆ.
ಇದನ್ನು ಓದಿದ್ದೀರಾ? ಸಣ್ಣ ವ್ಯಾಪಾರಿಗಳ ಮೇಲೆ ಜಿಎಸ್‌ಟಿ: ಆತಂಕ ಬೇಡ ಎನ್ನುತ್ತಾರೆ ತಜ್ಞರು
ಸಭೆಯಲ್ಲಿ ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. “ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ” ಎಂದು ಸಿಎಂ ವಿವರಿಸಿದರು.
ಸಭೆಯಲ್ಲಿ ಜಿಎಸ್ಟಿ ನೊಟೀಸ್ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದರು. ಹಾಗೆಯೇ ಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕು ಎಂದೂ ಮನವಿ ಮಾಡಲಾಗಿದೆ.
“ಯುಪಿಐ ಅಡಿ 40 ಲಕ್ಷ ರೂಪಾಯಿ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್‌ಟಿ ನೋಟಿಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್‌ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು. ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು” ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
“ನೊಟೀಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್‌ಟಿ ನೋಂದಣಿ ಮಾಡಬೇಕು” ಎಂದು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು.
“ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ” ಎಂದೂ ತಿಳಿಸಿದರು.
“ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ” ಎಂದು ಸಿಎಂ ಹೇಳಿದರು.
“ಜಿಎಸ್‌ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ ಶೇ.50ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್‌ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.





