ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಹರಿಯಾಣ ದಲಿತ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೋರಿದ್ದಾರೆ. ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕ್ರಮಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ಒತ್ತಾಯಿಸಿದ್ದಾರೆ.
ಕುಮಾರ್ ಅವರ ಕುಟುಂಬವನ್ನು ಭೇಟಿಯಾದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಈ ವಿಷಯ ಎಲ್ಲಾ ದಲಿತ ಕುಟುಂಬಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಒತ್ತಿ ಹೇಳಿದ್ದಾರೆ. ಹಾಗೆಯೇ, “ಕುಮಾರ್ ಅವರ ವೃತ್ತಿಜೀವನಕ್ಕೆ ಹಾನಿ ಮಾಡುವ ಉದ್ದೇಶದಿಂದ ವ್ಯವಸ್ಥಿತವಾಗಿ ದೌರ್ಜನ್ಯ ನಡೆಸಲಾಗಿದೆ” ಎಂದು ಆರೋಪಿಸಿದರು.
ಇದನ್ನು ಓದಿದ್ದೀರಾ? ಜಾತಿ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ್ದ ಹರಿಯಾಣ ದಲಿತ ಐಪಿಎಸ್ ಅಧಿಕಾರಿ ಶವವಾಗಿ ಪತ್ತೆ: ಆತ್ಮಹತ್ಯೆ ಶಂಕೆ
ಪೂರಣ್ ಕುಮಾರ್ ಅವರು ಈ ತಿಂಗಳ ಆರಂಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್ ನೋಟ್ ಬರೆದಿದ್ದಾರೆ. ಹಿರಿಯ ಅಧಿಕಾರಿಗಳಿಂದ ಜಾತಿ ನಿಂದನೆ, ಕಿರುಕುಳಕ್ಕೆ ಒಳಗಾದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಆರೋಪಿತ ಅಧಿಕಾರಿಗಳ ವರ್ಗಾವಣೆಯಾಗಿದ್ದರೂ ಬಂಧನವಾಗಿಲ್ಲ. ಈ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ವಿಪಕ್ಷಗಳು ತರಾಟೆಗೆ ತೆಗೆದುಕೊಂಡಿದೆ. ಈ ಎಲ್ಲಾ ಬೆಳವಣಿಗೆ ನಡುವೆ ರಾಹುಲ್ ಗಾಂಧಿ ಪೂರಣ್ ಕುಮಾರ್ ಅವರ ಕುಟುಂಬಸ್ಥರನ್ನು ಭೇಟಿಯಾಗಿ ಸಂತಾಪ ಸೂಚಿಸಿದ್ದಾರೆ.
ರಾಜ್ಯ ಸರ್ಕಾರವನ್ನು ಟೀಕಿಸಿದ ರಾಹುಲ್, “ಮುಕ್ತ ಮತ್ತು ನ್ಯಾಯಯುತ ತನಿಖೆ ನಡೆಸುವ ಬದ್ಧತೆಯಲ್ಲಿ ಸಿಎಂ ವಿಫಲರಾಗಿದ್ದಾರೆ. ಅಧಿಕಾರಿಯ ಆತ್ಮಹತ್ಯೆ ದಲಿತರಿಗೆ ತಪ್ಪು ಸಂದೇಶವನ್ನು ನೀಡುತ್ತದೆ. ನೀವು ಎಷ್ಟೇ ಯಶಸ್ಸು ಕಂಡಿದ್ದರೂ ನೀವು ದಲಿತರಾಗಿದ್ದರೆ ನಿಮ್ಮನ್ನು ಹತ್ತಿಕ್ಕಲಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
IPS अधिकारी वाई. पूरन कुमार जी की आत्महत्या हमारे समाज और सिस्टम की अंतरात्मा को झकझोर देने वाली त्रासदी है।
— Rahul Gandhi (@RahulGandhi) October 14, 2025
इससे पीड़ादायक क्या हो सकता है कि वाई. पूरन कुमार जी की पत्नी एक सप्ताह से अपने पति का सम्मानपूर्वक अंतिम संस्कार करने का इंतेज़ार कर रही हैं। वह, उनके बच्चे और उनका दर्द…
“ಪೂರಣ್ ಕುಮಾರ್ ಅವರ ಪತ್ನಿ ಸೇವೆಯಲ್ಲಿರುವ ಅಧಿಕಾರಿಯಾಗಿದ್ದು, ಅವರ ಮೇಲೆ ಹೇಗೆ ಒತ್ತಡ ಹೇರಬಹುದು ಎಂಬುದು ನಮಗೆಲ್ಲರಿಗೂ ತಿಳಿದಿದೆ. ಆದ್ದರಿಂದ ಈ ಪ್ರಕರಣದಲ್ಲಿ ಸಾಧ್ಯವಾದಷ್ಟು ಶೀಘ್ರ ಕ್ರಮ ಕೈಗೊಳ್ಳಬೇಕು, ತಪ್ಪಿತಸ್ಥರನ್ನು ಬಂಧಿಸಬೇಕು” ಎಂದು ರಾಹುಲ್ ಗಾಂಧಿ ಆಗ್ರಹಿಸಿದರು.
ಇನ್ನು ರಾಹುಲ್ ಗಾಂಧಿಯವರೊಂದಿಗೆ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಹರಿಯಾಣ ಕಾಂಗ್ರೆಸ್ ಮುಖ್ಯಸ್ಥ ರಾವ್ ನರೇಂದರ್ ಸಿಂಗ್, ಪಕ್ಷದ ನಾಯಕರಾದ ಕುಮಾರಿ ಸೆಲ್ಜಾ, ಬಿ ಕೆ ಹರಿಪ್ರಸಾದ್, ದೀಪೇಂದರ್ ಸಿಂಗ್ ಹೂಡಾ ಮತ್ತು ವರುಣ್ ಚೌಧರಿ ಇದ್ದರು. ವಿವಿಧ ರಾಜಕೀಯ ನಾಯಕರು ಚಂಡೀಗಢದಲ್ಲಿರುವ ಕುಮಾರ್ ಅವರ ಕುಟುಂಬವನ್ನು ಭೇಟಿ ಮಾಡಿ ಸಂತಾಪ ಸೂಚಿಸುತ್ತಿದ್ದರು.





