ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ವಿಧಿಸಲಾಗಿರುವ ಶಿಕ್ಷೆಯನ್ನು ಅಮಾನತಿನಲ್ಲಿಡಲು ಮತ್ತು ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.
ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣನನ್ನು ಅಪರಾಧಿ ಎಂದು ವಿಶೇಷ ನ್ಯಾಯಾಲಯವು ಘೋಷಿಸಿದೆ. ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿದೆ. ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಮೊರೆಹೋಗಿದ್ದರು. ತಮಗೆ ವಿಧಿಸಲಾಗಿರುವ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ, ಜಾಮೀನು ಮಂಜೂರು ಮಾಡುವಂತೆ ಕೋರಿದ್ದರು.
ಅವರ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಹಾಗೂ ನ್ಯಾಯಮೂರ್ತಿ ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ನ್ಯಾಯಪೀಠ, “ಅರ್ಜಿದಾರರು ಎಸಗಿದ್ದಾರೆ ಎನ್ನಲಾದ ಕೃತ್ಯದ ಗಂಭೀರತೆ, ಪ್ರಕರಣದ ದಾಖಲೆಗಳನ್ನು ಗಮನಿಸಿದರೆ, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಸಾಧ್ಯವಿಲ್ಲ. ಅರ್ಜಿದಾರರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಅದು ಅವರ ವಿರುದ್ಧದ ಇತರ ಪ್ರಕರಣಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ ಎಂಬುದನ್ನು ಪರಿಗಣಿಸಬೇಕಾಗುತ್ತದೆ. ಹೀಗಾಗಿ, ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಜಾಮೀನು ಮಂಜೂರು ಮಾಡಲು ಅರ್ಹವಾದ ಪ್ರಕರಣ ಇದಲ್ಲ” ಎಂದು ಹೇಳಿದೆ.
ಪ್ರಕರಣದ ಅಂತಿಮ ವಿಚಾರಣೆಯನ್ನು ಜನವರಿ 12ಕ್ಕೆ ಮುಂದೂಡಿದೆ.




