ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಸೇರಿದಂತೆ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಇತ್ತೀಚೆಗೆ ನಿರ್ಬಂಧ ವಿಧಿಸಿದ್ದ ರಾಜ್ಯ ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಆದೇಶವು ಇಂದಿನಿಂದಲೇ ಜಾರಿಯಾಗಲಿದೆ.
ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಸೇರಿ ಯಾವುದೇ ಖಾಸಗಿ ಸಂಘಟನೆಗಳು ಚಟುವಟಿಕೆ ನಡೆಸಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅದಾದ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರುಗಳು ನಡುವೆ ತೀವ್ರ ವಾಗ್ವಾದವೂ ನಡೆದಿತ್ತು. ಈ ನಡುವೆ ಖರ್ಗೆ ಅವರಿಗೆ ಬೆದರಿಕೆ ಕರೆಗಳೂ ಬಂದಿತ್ತು.
ಇದನ್ನು ಓದಿದ್ದೀರಾ? ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಎಫೆಕ್ಟ್: ಸರ್ಕಾರಿ ಜಾಗದಲ್ಲಿ RSS ಸೇರಿ ಎಲ್ಲ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ
ಈ ಎಲ್ಲಾ ಬೆಳವಣಿಗೆ ನಡುವೆ ಸರ್ಕಾರಿ ಜಾಗವನ್ನು ದುರುಪಯೋಗ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರವು ಆರ್‌ಎಸ್‌ಎಸ್ ಸೇರಿ ಖಾಸಗಿ ಸಂಘಟನೆಗಳ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿದೆ. ಕಾರ್ಯಕ್ರಮ ನಡೆಸುವುದಾದರೆ ಪೂರ್ವಾನುಮತಿ ಕಡ್ಡಾಯಗೊಳಿಸಿದೆ.
ಸರ್ಕಾರದ ಅಧಿಕೃತ ಆದೇಶ ಏನು ಹೇಳುತ್ತದೆ?
ಸರ್ಕಾರದ / ಸರ್ಕಾರಿ ಸಾಮ್ಯದ / ನಿಗಮ/ಮಂಡಳಿಗಳ ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು, ತೆರೆದ ಸ್ಥಳಗಳು ಮತ್ತು ಇತರ ಆಸ್ತಿ / ಜಾಗಗಳು ನಾಗರೀಕರ ಸದ್ಬಳಕೆಗೆ ನಿರ್ದಿಷ್ಟಪಡಿಸಲಾಗಿರುತ್ತದೆ. ಇವುಗಳನ್ನು ಸಾರ್ವಜನಿಕರು ಬಳಸಲು ಯಾವುದೇ ಅಡಚಣೆಗಳು, ಬೆದರಿಕೆಗಳು ಉದ್ಭವಿಸದಂತೆ ಕ್ರಮವಹಿಸುವುದು ಅತ್ಯಗತ್ಯವಾಗಿರುತ್ತದೆ. ಹಾಗೆಯೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು, ಸಾರ್ವಜನಿಕರ ಸಾರ್ವತ್ರಿಕ ಅಸಮಾಧಾನಗಳನ್ನು ನಿವಾರಿಸುವುದು ಸಹ ಅವಶ್ಯವಾಗಿರುತ್ತದೆ.
ರಾಜ್ಯದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪ್ರಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್ಯರ ಮತ್ತು ಬೆಂಬಲಿಗರ ಸಭೆಗಳು ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು / ಸರ್ಕಾರದ ಆಸ್ತಿಗಳು, ಜಮೀನುಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಇತ್ಯಾದಿಗಳನ್ನು ಸರ್ಕಾರ ಅಥವಾ ಸಂಬಂಧಿತ ಇಲಾಖೆಗೆ ಮುಂಚಿತವಾಗಿ ಅನುಮತಿ ಪಡೆಯದೆ, ಅನೇಕ ಸಂದರ್ಭಗಳಲ್ಲಿ ಮಾಹಿತಿ ನೀಡದ ಬಳಸಿಕೊಳ್ಳುತ್ತಿರುವುದು ಕಂಡುಬಂದಿದೆ. ಇಂತಹ ಕ್ರಿಯೆಗಳು ಅಕ್ರಮ ಪ್ರವೇಶ (Tresspass) ಎಂದು ಪರಿಗಣಿಸಲ್ಪಡುತ್ತವೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಉಂಟುಮಾಡುತ್ತವೆ. ಈ ಕಾರಣದಿಂದ ಸರ್ಕಾರದ ಯಾವುದೇ ಆಸ್ತಿ / ಸ್ಥಳದ ಬಳಕೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ನಿಯಂತ್ರಿಸುವ ಸಲುವಾಗಿ ಯಾವುದೇ ಸಂಘಟನೆ, ಸಂಸ್ಥೆ, ಸಂಘವು ಆಯಾ ಸಾರ್ವಜನಿಕ ಆಸ್ತಿ/ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಬಳಸಿಕೊಳ್ಳಲು ಅನುಮತಿ ನೀಡುವುದು ಅಗತ್ಯವಾಗಿರುತ್ತದೆ.
ಇದನ್ನು ಓದಿದ್ದೀರಾ? ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ; ಆರ್‌ಎಸ್‌ಎಸ್ ಬೆಂಬಲಿಗ ದಿನೇಶ್ ಬಂಧನ
ಯಾವುದೇ ಚಟುವಟಿಕೆಗಳು ಸಾರ್ವಜನಿಕರಿಗೆ ಅನಾನುಕೂಲವಾಗುವುದಾದಲ್ಲಿ ಹಾಗೂ ಸಂಬಂಧಿಸಿದ ಸಂಸ್ಥೆಗಳ ಆವರಣ/ಜಾಗದಲ್ಲಿ ನಡೆಯುವ ಚಟುವಟಿಕೆಗಳಿಂದ ಆ ಸಂಸ್ಥೆಗಳ ಮೂಲ ಧ್ಯೇಯಕ್ಕೆ ಧಕ್ಕೆ ಉಂಟಾಗುವುದಾದಲ್ಲಿ ಅಂತಹ ಚಟುವಟಿಕೆಗಳ ಆಯೋಜನೆಗೆ ಸಕ್ಷಮ ಪ್ರಾಧಿಕಾರಗಳು ಅನುಮತಿಯನ್ನು ನಿರಾಕರಿಸತಕ್ಕದ್ದು.
ಯಾವೆಲ್ಲ ಸ್ಥಳಗಳಲ್ಲಿ ಅನುಮತಿ ಕಡ್ಡಾಯ?
ಈ ಕೆಳಕಂಡ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲಾಗುವ ಖಾಸಗಿ ಸಂಘ, ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅವುಗಳ ಎದುರಿಗೆ ನಮೂದಿಸಲಾದ ಮಾಲಿಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳು ಅನುಮತಿ ನೀಡುವುದನ್ನು ಪರಿಶೀಲಸತಕ್ಕದ್ದು:-
ಸರ್ಕಾರದ/ಸರ್ಕಾರಿ ಸಾಮ್ಯದ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣ – ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
ಉದ್ಯಾನವನಗಳು, ಆಟದ ಮೈದಾನಗಳು, ಇತರೆ ತೆರೆದ ಸ್ಥಳಗಳು ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಸಾರ್ವಜನಿಕ ರಸ್ತೆಗಳು, ಸರ್ಕಾರದ ಇತರೆ ಆಸ್ತಿ/ ಸ್ಥಳಗಳು – ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು/ ಪೊಲೀಸ್ ಅಧೀಕ್ಷಕರು.
ಇನ್ನು ಸೂಕ್ತ ಮಾರ್ಗಸೂಚಿಯನ್ನು ಆಯಾ ಇಲಾಖೆ ಹೊರಡಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶದಲ್ಲಿ ತಿಳಿಸಿದೆ.





