ಕೋವಿಡ್ ವಿಚಾರವಾಗಿ ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿ ಮಾತನಾಡಿದರು.
“ಸದ್ಯಕ್ಕೆ ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ. ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು” ಎಂದರು.
“ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು. ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆ.ಆರ್.ಪೇಟೆ ದಲಿತ ಯುವಕ ಜಯಕುಮಾರ್ ಕೇಸ್‌ನಲ್ಲಿ ಪೊಲೀಸರು ಕುರುಡಾಗಿದ್ದು ಅಕ್ಷಮ್ಯ
“ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ, ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು” ಎಂದರು.
“ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೂ ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ. SARI ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ” ಎಂದು ಮಾಹಿತಿ ನೀಡಿದರು.
“ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭ ಮಾಡಿ. ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಕ್ರಮ ವಹಿಸಿ” ಎಂದು ಸೂಚಿಸಿದರು.





