2024ರ ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕರ್ನಾಟಕದ ಮೂವರು ಮಾಜಿ ಮುಖ್ಯಮಂತ್ರಿಗಳು ಗೆಲುವು ಸಾಧಿಸಿದ್ದು ಸಂಸತ್ತಿಗೆ ಕಾಲಿಡಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್‌ಡಿ ಕುಮಾರಸ್ವಾಮಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ.
ಈ ಮೂವರು ನಾಯಕರು ರಾಜ್ಯದ ರಾಜಕಾರಣಕ್ಕೆ ಸೀಮಿತವಾಗಿದ್ದರು. ಇದೀಗ, ಸಂಸದರಾಗಿ ರಾಷ್ಟ್ರ ರಾಜಕೀಯದಲ್ಲಿ ತೋಡಗಿಕೊಳ್ಳಲಿದ್ದಾರೆ.
ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸದ್ಯ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಕುಮಾರಸ್ವಾಮಿ, ಮಂಡ್ಯದಲ್ಲಿ ಗೆದ್ದು ಸಂಸತ್ ಪ್ರವೇಶಿಸುತ್ತಿದ್ದಾರೆ.
ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಶಿಗ್ಗಾವಿ ಶಾಸಕ, ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು 41,998 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬೊಮ್ಮಾಯಿ 7,02,189 ಮತಗಳನ್ನು ಪಡೆದು, ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ (6,60,191) ಅವರನ್ನು ಮಣಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಡಿ.ಕೆ ಸುರೇಶ್ ಹೀನಾಯ ಸೋಲು; ರಾಜಕೀಯ ಭವಿಷ್ಯಕ್ಕಾಗಿ ‘ಚನ್ನಪಟ್ಟಣ’ಕ್ಕೆ ಕಾಲಿಡುವ ಸಾಧ್ಯತೆ?
2023ರ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಬಸವರಾಜ್ ಬೊಮ್ಮಾಯಿ 1 ಲಕ್ಷಕ್ಕೂ ಹೆಚ್ಚು ಮತ ಪಡೆದು ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಗಮದ್ ಖಾನ್ ಪಠಾಣ್ ವಿರುದ್ಧ ಗೆಲುವು ಕಂಡಿದ್ದರು.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ವಿರುದ್ಧ ಸ್ಪರ್ಧಿಸಿ 68,792 ಮತಗಳ ಅಂತರದಲ್ಲಿ ಗೆದ್ದಿದ್ದಾರೆ.
ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳು ಸಂಸತ್ ಪ್ರವೇಶಿಸುತ್ತಿದ್ದಾರೆ. ಹಾಲಿ ಶಾಸಕರಾಗಿರುವ ಎಚ್.ಡಿ ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಬೇಕಿತ್ತು. ಅವರ ರಾಜೀನಾಮೆಯಿಂದ ಚನ್ನಪಟ್ಟಣ ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳು ತೆರವಾಗಲಿವೆ. ಈ ಎರಡೂ ಕ್ಷೇತ್ರಗಳಿಗೆ ಆರು ತಿಂಗಳೊಳಗೆ ಉಪಚುನಾವಣೆ ನಡೆಯುವ ಸಾಧ್ಯತೆಗಳಿವೆ.




