ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದೆ ಅತಂತ್ರವಾಗಿರುವ ಸಂಸದೆ ಸುಮಲತಾ ಅಂಬರೀಶ್, ತಮ್ಮ ಮುಂದಿನ ನಿರ್ಧಾರವನ್ನು ಏಪ್ರಿಲ್ 3ರಂದು ಬೆಂಬಲಿಗರ ಸಭೆ ನಡೆಸಿದ ಬಳಿಕ ಘೋಷಿಸುವುದಾಗಿ ಹೇಳಿದ್ದರು. ಈ ನಡುವೆಯೇ ಇಂದು(ಏಪ್ರಿಲ್ 2) ಸುದೀರ್ಘವಾದ ಫೇಸ್‌ಬುಕ್ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, “ನಿಮ್ಮ ನಡೆಯೇ ನನ್ನದೂ ಆಗಿರಲಿದೆ” ಎಂದು ತಿಳಿಸುವ ಮೂಲಕ ಕುತೂಹಲ ಸೃಷ್ಟಿಸಿದ್ದಾರೆ.
ತನ್ನ ಪೋಸ್ಟ್‌ನಲ್ಲಿ ಪರೋಕ್ಷವಾಗಿ ಪಕ್ಷೇತರವಾಗಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದು, “ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ” ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ.
ಸುಮಲತಾ ಫೇಸ್‌ಬುಕ್ ಪೋಸ್ಟ್ ಹೀಗಿದೆ.
“ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೇ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.”
“ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ” ಎಂದು ತಿಳಿಸಿದ್ದಾರೆ.
“ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆಯವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.
ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ” ಎಂದು ಸುಮಲತಾ ಹೇಳಿಕೆ ನೀಡಿದ್ದಾರೆ.
“ನಾಳೆ(ಏಪ್ರಿಲ್ 3) ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ” ಎಂದು ಹೇಳುವ ಮೂಲಕ ಪರೋಕ್ಷವಾಗಿ ಪಕ್ಷೇತರವಾಗಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದು, ಈ ಪೋಸ್ಟ್‌ನೊಂದಿಗೆ ಅಂಬರೀಶ್, ದರ್ಶನ್, ಅಭಿಷೇಕ್ ಅಂಬರೀಶ್ ಅವರ ಫೋಟೋವನ್ನು ಕೂಡ ಬಳಸಿಕೊಂಡಿದ್ದಾರೆ.





