ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್‌ನಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳ ಸ್ಥಾಪನೆ, ಕೆ.ಸಿ ವ್ಯಾಲಿ ನೀರಿನ ಮೂರನೇ ಹಂತದ ಶುದ್ಧೀಕರಣ, ನೀರಾವರಿ ಯೋಜನೆಗಳಿಗೆ ಅನುದಾನ ಹಾಗೂ ಕೋಲಾರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ವಿವಿಧ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.
ಈ ಕುರಿತು ಈದಿನ.ಕಾಮ್‌ನೊಂದಿಗೆ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ವಿ. ಗೀತಾ ಅವರು, “ಕೋಲಾರ ಜಿಲ್ಲೆಗೆ ಹರಿಯುತ್ತಿರುವ ಕೆ.ಸಿ ವ್ಯಾಲಿ ನೀರನ್ನು ಮೂರನೇ ಹಂತದಲ್ಲಿ ಶುದ್ಧೀಕರಿಸುವುದಾಗಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದ್ದು, ಅದನ್ನು ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿನ ನೀರಾವರಿ ಯೋಜನೆಗಳಿಗೆ ಸಮರ್ಪಕ ಅನುದಾನ ಮೀಸಲಿಡಬೇಕು. ಕೃಷಿ ಕ್ಷೇತ್ರದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದ ನಿರುದ್ಯೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳು ಹಾಗೂ ಕೈಗಾರಿಕಾ ಪ್ರದೇಶಗಳನ್ನು ಹೆಚ್ಚಾಗಿ ಸ್ಥಾಪಿಸಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು” ಎಂದು ಹೇಳಿದರು.

ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ದುರ್ಬಲ ಸ್ಥಿತಿಗೆ ತಲುಪಿದ್ದು, ರೈತರು ಪಡೆದಿರುವ ಸಾಲಗಳಿಗೆ ಬಡ್ಡಿ ಸಬ್ಸಿಡಿ ಹಣವನ್ನು ಸರ್ಕಾರ ಇನ್ನೂ ಬಿಡುಗಡೆ ಮಾಡಿಲ್ಲ. ಜೊತೆಗೆ ಅನೇಕ ರೈತರಿಗೆ ಸಾಲ ಸೌಲಭ್ಯ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬಜೆಟ್‌ನಲ್ಲಿ ರೈತರಿಗೆ ಬಡ್ಡಿರಹಿತ ಸಾಲ ಘೋಷಣೆ ಮಾಡಬೇಕು ಹಾಗೂ ಶ್ರೀಶಕ್ತಿ ಸಂಘಗಳಿಗೆ ಸುಲಭವಾಗಿ ಸಾಲ ದೊರೆಯುವ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.
ಇದೇ ವೇಳೆ ಕೋಲಾರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಪರಿಗಣಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ವಿವಿಧ ಸಂಘಟನೆಗಳು ಆಗ್ರಹಿಸಿವೆ. ಮಾರ್ಚ್ 6ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ನಲ್ಲಿ ಕೋಲಾರ ಜಿಲ್ಲೆಗೆ ಸಮರ್ಪಕ ಅನುದಾನ ನೀಡಬೇಕು. ಗಡಿ ಜಿಲ್ಲೆಯಾಗಿರುವ ಕೋಲಾರದಲ್ಲಿ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಬಹುಕಾಲದಿಂದ ಬೇಡಿಕೆ ಇದ್ದು, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ನಿರುದ್ಯೋಗ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಸಾವಿರಾರು ಯುವಕರು ಉದ್ಯೋಗಕ್ಕಾಗಿ ಬೆಂಗಳೂರಿಗೆ ವಲಸೆ ಹೋಗುತ್ತಿರುವುದು ಸಾಮಾನ್ಯವಾಗಿದೆ. ಇದನ್ನು ತಡೆಯಲು ಕೈಗಾರಿಕಾ ಪ್ರದೇಶಗಳನ್ನು ಹೆಚ್ಚಿಸಿ ಸ್ಥಳೀಯ ಮಟ್ಟದಲ್ಲೇ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಎಂದು ಸಂಘಟನೆಗಳು ಸರ್ಕಾರವನ್ನು ಆಗ್ರಹಿಸಿವೆ.
ಕೋಲಾರ ಜಿಲ್ಲೆಯಲ್ಲಿ ದಲಿತ ಸಮುದಾಯದ ಜನಸಂಖ್ಯೆ ಹೆಚ್ಚಿದ್ದು, ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳು ಹಾಗೂ ಕೋಲಾರ ಲೋಕಸಭಾ ಕ್ಷೇತ್ರವೂ ಮೀಸಲಾತಿ ವ್ಯಾಪ್ತಿಗೆ ಸೇರಿವೆ. ಆದ್ದರಿಂದ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದ ಹೆಚ್ಚಿನ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಣೆ ಮಾಡಬೇಕು ಎಂಬ ಬೇಡಿಕೆ ವ್ಯಕ್ತವಾಗಿದೆ.

ದಲಿತ ಸಮಾಜಸೇನೆ ರಾಜ್ಯಾಧ್ಯಕ್ಷ ಸೂಲಿಕೂಂಟೆ ಆನಂದ್ ಮಾತನಾಡಿ, ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಸಂಸದರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ತಂದು ಕೋಲಾರ ಜಿಲ್ಲೆಯ ಅಗತ್ಯಗಳನ್ನು ಮನವರಿಕೆ ಮಾಡಿಸಿ ಹೆಚ್ಚಿನ ಅನುದಾನ ತರಬೇಕು. ಇಲ್ಲವಾದರೆ ಜನಪ್ರತಿನಿಧಿಗಳ ಮನೆಗಳ ಮುಂದೆ ‘ತಮಟೆ ಚಳವಳಿ’ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ರಾಜಧಾನಿ ಬೆಂಗಳೂರಿಗೆ ಕೇವಲ 70 ಕಿಲೋಮೀಟರ್ ದೂರದಲ್ಲಿದ್ದರೂ ಕೋಲಾರ ಜಿಲ್ಲೆ ಇನ್ನೂ ಸಮಗ್ರ ಅಭಿವೃದ್ಧಿ ಕಂಡಿಲ್ಲ ಎಂಬ ಬೇಸರವನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ. ಅವಿಭಜಿತ ಕೋಲಾರ ಜಿಲ್ಲೆಯಿಂದ ಬೇರ್ಪಟ್ಟ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾದರೂ, ಕೋಲಾರದಲ್ಲಿ ಇನ್ನೂ ಆ ಸೌಲಭ್ಯ ದೊರಕಿಲ್ಲ. ಜೊತೆಗೆ ಎತ್ತಿನಹೊಳೆ ಯೋಜನೆಯ ನೀರು ಕೂಡ ಜಿಲ್ಲೆಗೆ ತಲುಪದಿರುವುದು ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಕೋಲಾರ | ಮಾನವೀಯ ಮೌಲ್ಯಗಳನ್ನು ಹರಡಿದರಷ್ಟೇ ಸಮಸಮಾಜ ನಿರ್ಮಾಣ ಸಾಧ್ಯ: ಡಿಸಿ ಡಾ.ರವಿ
ಈ ಬಾರಿಯ ರಾಜ್ಯ ಬಜೆಟ್ ಕುರಿತು ಕೋಲಾರ ಜಿಲ್ಲೆಯ ಜನರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದು, ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಯೋಜನೆಗಳು ಘೋಷಣೆಯಾಗುತ್ತವೆಯೇ ಎಂಬುದನ್ನು ಕಾತರದಿಂದ ಕಾಯುತ್ತಿದ್ದಾರೆ.





