ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA)ಗೆ ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ. ನ್ಯಾಯಮೂರ್ತಿ ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಬಳಿಕ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಿದೆ.
2025ರ ಜೂನ್ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ನೂಕುನುಗ್ಗಲಿನಲ್ಲಿ 11 ಮಂದಿ ಮೃತಪಟ್ಟಿದ್ದರು. ಈ ಕಾಲ್ತುಳಿತ ದುರಂತದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಮುಖ ಪಂದ್ಯಗಳನ್ನು ನಡೆಸುವುದನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು.
ಇದನ್ನು ಓದಿದ್ದೀರಾ? ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಪಂದ್ಯಕ್ಕೆ ಅನುಮತಿ ನಿರಾಕರಣೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಅನುಮತಿ ನೀಡುವ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದರು. ಇದೀಗ ಪಂದ್ಯಕ್ಕೆ ಸರ್ಕಾರ ಅನುಮತಿ ನೀಡಿದೆ ಎಂದು ವರದಿಯಾಗಿದೆ.





