ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗಿದೆ. ಈ ಹಿನ್ನೆಲೆ, ನಗರದ ಜನತೆ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆದೇಶಿಸಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ನಿಷೇಧಿತ ಆದೇಶ ಜಾರಿ ತಂದಿರುವ ಮಂಡಳಿ ಈ ಆದೇಶ ಉಲ್ಲಂಘಿಸಿದವರಿಗೆ ದಂಡ ಹಾಕುವುದಾಗಿ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲ್‌ಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಹಾಗೂ ಸ್ವಚ್ಚತೆಗೆ ಬಳಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34ರ ಅನುಸಾರ ನೀಷೇಧಿಸಲಾಗಿದೆ ಎಂದು ಬಿಡಬ್ಲ್ಯೂಎಸ್ಎಸ್‌ಬಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾದ್ ಮನೋಹರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
”ಈ ನಿಷೇಧ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ₹5000 ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡದ ಮೊತ್ತ ₹5000 ಜತೆಗೆ ಹೆಚ್ಚುವರಿಯಾಗಿ ₹500 ಪ್ರತಿ ದಿನದಂತೆ ದಂಡ ಹಾಕಲಾಗುವುದು” ಎಂದು ಅವರು ಹೇಳಿದ್ದಾರೆ.
”ಸಾರ್ವಜನಿಕರಿಗೆ ಮಂಡಳಿ ನೀಡಿದ ಆದೇಶಗಳನ್ನು ಯಾರಾದರೂ ಉಲ್ಲಂಘನೆ ಮಾಡುವುದು ಕಂಡುಬಂದರೆ, ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ 1916 ಗೆ ತಿಳಿಸಬಹುದು” ಎಂದು ಅವರು ಮನವಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳ: ಹವಾಮಾನ ಇಲಾಖೆ ತಜ್ಞ
”ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವಿದೆ. ಇದನ್ನು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಆಗತ್ಯಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ” ಎಂದು ಅವರು ವಿವರಿಸಿದ್ದಾರೆ.




