ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ನಿಷೇಧಿಸಿದ್ದನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ರದ್ದುಗೊಳಿಸಿದೆ.
ಓಲಾ, ಊಬರ್ ಮತ್ತಿತರ ಅಗ್ರಿಗೇಟರ್‌ಗಳು ಸಲ್ಲಿಸಿದ ಮೇಲ್ಮನವಿಗಳನ್ನು ವಿಭಾಗೀಯ ಪೀಠ ಮಾನ್ಯ ಮಾಡಿದೆ.
ಈ ಬಗ್ಗೆ ಬೈಕ್ ಮಾಲೀಕರು ಅಥವಾ ಅಗ್ರಿಗೇಟರ್ ಗಳು ಸಾರಿಗೆ ವಾಹನಗಳನ್ನಾಗಿ ಬಳಸಲು ಅನುಮತಿ ಕೋರಿ ಮನವಿ ಸಲ್ಲಿಸಬೇಕು. ಕಾನೂನಿನಡಿ ಸರ್ಕಾರ ಪರವಾನಿಗೆ ನೀಡಬೇಕು ಎಂದು ವಿಭಾಗೀಯ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಕಳೆದ ವರ್ಷ ಏಪ್ರಿಲ್‌ನಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ತಡೆ ನೀಡಲಾಗಿತ್ತು. ಜೂನ್‌ನಲ್ಲಿ ಟ್ಯಾಕ್ಸಿ ಅಗ್ರಿಗೇಟರ್‌ಗಳು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದವು. ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿತ್ತು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಗೆ ಧಕ್ಕೆ ತರುವುದು ಆಡಳಿತವೇ?
ಹೈಕೋರ್ಟ್ ಆದೇಶವೇನು? :
ದ್ವಿಚಕ್ರ ವಾಹನ ಮಾಲಕರು ತಮ್ಮ ವಾಹನಗಳನ್ನು ಸಾರಿಗೆ ವಾಹನ (Transport Vehicle) ಎಂದು ನೋಂದಾಯಿಸಲು ಅರ್ಜಿ ಸಲ್ಲಿಸಲು ಮುಕ್ತರಾಗಿದ್ದಾರೆ. ಇಂತಹ ಅರ್ಜಿಗಳನ್ನು ಕಾನೂನು ಪ್ರಕಾರ ಪರಿಗಣಿಸಿ, ವಾಹನ ಮಾಲಕರಿಗೆ ಸಾರಿಗೆ ವಾಹನವಾಗಿ ನೋಂದಣಿ ನೀಡಲು ಮತ್ತು ಕಾಂಟ್ರಾಕ್ಟ್ ಕ್ಯಾರೇಜ್ ಆಗಿ ಕಾರ್ಯನಿರ್ವಹಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪ್ರಸ್ತುತ ನಿಯಮಾವಳಿಗಳನ್ನು ಪರಿಶೀಲಿಸಬಹುದಾದರೂ, ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನ ಅಥವಾ ಕಾಂಟ್ರಾಕ್ಟ್ ಕ್ಯಾರೇಜ್ ಆಗಿ ಬಳಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ ಅನುಮತಿ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 74(2)ರ ಪ್ರಕಾರ ಅಗತ್ಯವೆಂದು ಕಂಡುಬರುವ ಷರತ್ತುಗಳನ್ನು ವಿಧಿಸಬಹುದು. ಅಗ್ರಿಗೇಟರ್‌ಗಳು ಸಹ ಹೊಸದಾಗಿ ಅರ್ಜಿ ಸಲ್ಲಿಸಲು ಸ್ವತಂತ್ರರಾಗಿದ್ದು, ಅಂತಹ ಅರ್ಜಿಗಳನ್ನು ಈ ಆದೇಶದಲ್ಲಿ ನ್ಯಾಯಾಲಯದ ಅವಲೋಕನಗಳು ಹಾಗೂ ಕಾನೂನಿನ ಚೌಕಟ್ಟಿನಡಿಯಲ್ಲಿ ಪರಿಗಣಿಸಬೇಕು ಎಂದು ತಿಳಿಸಿರುವ ಹೈಕೋರ್ಟ್, ಏಕಸದಸ್ಯ ನ್ಯಾಯಪೀಠದ ಆದೇಶ ರದ್ದುಪಡಿಸಿ, ಮೇಲ್ಮನವಿಗಳನ್ನು ಮಾನ್ಯ ಮಾಡಿದೆ. ವಿಸ್ತೃತ ತೀರ್ಪು ಲಭ್ಯವಾಗಬೇಕಿದೆ.





