SSLC ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಬಂಧಿತರಲ್ಲಿ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಸೇರಿದ್ದಾರೆ.
ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್‌ನಲ್ಲಿ ಹರಿದಾಡುತ್ತಿರುವುದು ಪತ್ತೆಯಾಗಿತ್ತು. ಈ ಸಂಬಂಧ ಬೆಂಗಳೂರು ಉತ್ತರ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿತ್ತು. ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ದೃಢಪಟ್ಟಿತ್ತು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಟ್ರಂಪ್ ವಿರುದ್ಧ ಇನ್ನಾದರೂ ಎದೆ ಸೆಟೆಸುವರೇ ಮೋದಿ?
ಪೊಲೀಸರ ಮಾಹಿತಿ ಪ್ರಕಾರ, ತುಮಕೂರು, ರಾಮನಗರ ಮತ್ತು ಕಲಬುರಗಿ ಜಿಲ್ಲೆಗಳ ಕೆಲವು ಶಾಲೆಗಳ ಶಿಕ್ಷಕರು ಈ ಸೋರಿಕೆ ಪ್ರಕರಣದಲ್ಲಿ ಶಾಮೀಲಾಗಿರುವುದು ಪತ್ತೆಯಾಗಿದೆ. ತುಮಕೂರಿನ ಶಾಲೆಯೊಂದರ ಮುಖ್ಯೋಪಾಧ್ಯಾಯ ವಿ.ಡಿ. ಗಿರೀಶ್, ರಾಮನಗರದ ಸಹ ಶಿಕ್ಷಕ ಅಮ್ಜದ್ ಖಾನ್ ಸೇರಿದಂತೆ ಕಲಬುರಗಿ ಜಿಲ್ಲೆಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಬಂಧನಕ್ಕೊಳಗಾಗಿದ್ದಾರೆ.
ಸದ್ಯ ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಯಾವ ರೀತಿಯಲ್ಲಿ ನಡೆದಿದೆ, ಇನ್ನಿತರರು ಶಾಮೀಲಾಗಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಶಿಕ್ಷಣ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ತಂದಿರುವ ಈ ಪ್ರಕರಣ ರಾಜ್ಯಾದ್ಯಂತ ಆತಂಕ ಮೂಡಿಸಿದೆ.





