ಕೇಂದ್ರ ಸರ್ಕಾರವು ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಹಿಂಪಡೆದು, ನರೇಗಾ ಕಾಯ್ದೆಯನ್ನು ಮರು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಇಂದು(ಜ.28) ‘ ಲೋಕಭವನ’ ಚಲೋ ಹಮ್ಮಿಕೊಂಡಿದೆ.
ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ಲೋಕಭವನ ಚಲೋ ನಡೆಸಲಾಗುವುದು. ಪ್ರತಿ ತಾಲೂಕುಗಳಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತ್ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
20 ವರ್ಷಗಳ ಹಿಂದೆ ಸೋನಿಯಾ ಗಾಂಧಿ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲ ಆಶ್ಚರ್ಯವನ್ನುಂಟು ಮಾಡಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಪ್ರಾರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ, ಈ ಹಕ್ಕು ಈಗ ಮೊಟಕಾಗಿದೆ. ಆದ ಕಾರಣ ಇಡೀ ದೇಶದ ಉದ್ದಗಲಕ್ಕೂ ಈ ಬಗ್ಗೆ ಹೋರಾಟ ರೂಪಿಸಲಾಗಿದೆ ಎಂದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಗುಣಮಟ್ಟ ಕುರಿತು ಮಾತಾಡಲು ಮೋದೀಜಿಗೆ ನೈತಿಕ ಹಕ್ಕು ಇಲ್ಲವೇ ಇಲ್ಲ!
ಪ್ರತಿವರ್ಷ 6 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ಮನರೇಗಾ ಅಡಿ ನಡೆಯುತ್ತಿದ್ದವು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ದೊರೆಯುತ್ತಿತ್ತು. ವಿಧಾನಸಭೆಯಲ್ಲೂ ಇದರ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ. ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು. ಮನರೇಗಾವನ್ನು ನಾಶ ಮಾಡುವ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗುವುದು. ರೈತರ ಕರಾಳ ಕಾಯ್ದೆಗಳನ್ನು ಹೇಗೆ ಹಿಂಪಡೆಯಲಾಯಿತೋ, ಅದೇ ರೀತಿ ಇದನ್ನೂ ಹಿಂಪಡೆಯಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಸಹ ಬಾಯಿ ಬಿಡುತ್ತಿಲ್ಲ. ಹೊಸ ಕಾಯ್ದೆ ಅನುಷ್ಠಾನಗೊಳಿಸಲು ಸಾಧ್ಯವಿಲ್ಲ. ಗ್ರಾಮೀಣ ಭಾಗದ ಜನಪ್ರತಿನಿಧಿಯಾಗಿ ನನ್ನ ಅನುಭವದಲ್ಲಿ ಹೇಳುವುದಾದರೆ ಇದರ ಅನುಷ್ಠಾನ ಅಸಾಧ್ಯ. ಈ ಯೋಜನೆಗೆ ಅನುದಾನ ಒದಗಿಸಿ ಕೊಡುವವರು ಯಾರು? ಕೇಂದ್ರವೇ ಅನುದಾನ ಒದಗಿಸಿಕೊಡಲಿ. ಕೆಲವು ನಾಯಕರು ಚರ್ಚೆಗೆ ಬರುತ್ತೇವೆ ಎಂದು ಹೇಳಿದ್ದಾರೆ. ನಾವು ಸದನದಲ್ಲಿ ಅವರ ಚರ್ಚೆಗೆ ಉತ್ತರ ನೀಡಲು ಸಿದ್ಧರಿದ್ದೇವೆ ಎಂದು ಹೇಳಿದರು.





